ಬೆಂಗಳೂರು: ರಾಹುಲ್ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತರು; ಮೋದಿ ಪರ ಘೋಷಣೆ

Update: 2019-03-18 15:40 GMT

ಬೆಂಗಳೂರು, ಮಾ. 18: ನವೋದ್ಯಮಿಗಳೊಂದಿಗಿನ ಸಂವಾದ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿ ‘ಮೋದಿ ಮೋದಿ’ ಎಂದು ಘೋಷಣೆ ಕೂಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ.

ಸೋಮವಾರ ನಾಗವಾರದಲ್ಲಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಆಂಪಿ ಥಿಯೇಟರ್‌ನಲ್ಲಿ ನವೋದ್ಯಮಿಗಳೊಂದಿಗೆ ರಾಹುಲ್ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಕೆಲವರು ‘ಮೋದಿ ಮೋದಿ’ ಎಂದು ಘೋಷಣೆ ಕೂಗಿದರು.

ಬಿಜೆಪಿ ಮತ್ತು ಸಂಘಪರಿವಾರದ ಕೆಲವರು ಭಿತ್ತಿಪತ್ರಗಳನ್ನು ಹಿಡಿದು ಮೋದಿ ಪರ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ. ಇದೇ ವೇಳೆ ಸ್ಥಳದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿಯೂ ನಡೆಯಿತು.

ಕೂಡಲೇ ಮಧ್ಯಪ್ರವೇಶಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಮೋದಿ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರನ್ನು ಚದುರಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಕಾರ್ಯಕರ್ತರನ್ನು ಸಮಾಧಾನಪಡಿಸಿ ನವೋದ್ಯಮಿಗಳೊಂದಿಗಿನ ಸಂವಾದ ಕಾರ್ಯಕ್ರಮ ಸುಗಮವಾಗಿ ನಡೆಯಲು ಅನುವು ಮಾಡಿಕೊಟ್ಟಿದ್ದಾರೆ.

ರಮ್ಯಾ ದಿಢೀರ್ ಪ್ರತ್ಯಕ್ಷ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂವಾದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹಾಗೂ ಮಾಜಿ ಸಂಸದೆ ರಮ್ಯಾ ದಿಢೀರ್ ಪ್ರತ್ಯಕ್ಷರಾಗಿದ್ದಾರೆ. ನವೋದ್ಯಮಿಗಳೊಂದಿಗಿನ ಸಂವಾದ ಕಾರ್ಯಕ್ರಮದ ಉಸ್ತುವಾರಿಯನ್ನು ರಮ್ಯಾ ನೋಡಿಕೊಳ್ಳುತ್ತಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News