15 ರಾಜ್ಯಗಳಲ್ಲಿ ಮೈತ್ರಿ ಮಾಡಿದ ಮೋದಿ ನಮ್ಮ ಮೈತ್ರಿ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ: ದೇವೇಗೌಡ

Update: 2019-03-19 14:49 GMT

ಬೆಂಗಳೂರು, ಮಾ.19: ಪ್ರಧಾನಿ ನರೇಂದ್ರ ಮೋದಿ ಮಹಾಘಟಬಂಧನ ಕುರಿತು ಲಘುವಾಗಿ ಮಾತನಾಡುತ್ತಿರುವುದು ಸರಿಯಲ್ಲ. ದೇಶದ 15 ರಾಜ್ಯಗಳಲ್ಲಿ ಬಿಜೆಪಿ ಘಟಬಂಧನ ಸರಕಾರ ನಡೆಸುತ್ತಿರುವುದನ್ನು ಮರೆಯಬಾರದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.

ಮಂಗಳವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸುವುದೇ ಜೆಡಿಎಸ್-ಕಾಂಗ್ರೆಸ್ ಮೈತ್ರಿಯ ಏಕೈಕ ಗುರಿಯಾಗಿದೆ. ಹೀಗಾಗಿ ಎರಡು ಪಕ್ಷಗಳ ನಾಯಕರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾಯಕರ ಒಗ್ಗಟ್ಟಿನ ಕುರಿತು ಕಾರ್ಯಕರ್ತರಲ್ಲಿ ವಿಶ್ವಾಸ ಮೂಡಿಸಬೇಕಾಗಿದೆ ಎಂದರು.

ನನಗೆ ಎರಡು ತಿಂಗಳು ಕಳೆದರೆ 87 ವರ್ಷ ಆಗಲಿದೆ. ಹೀಗಾಗಿ ಈ ಸಲದ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ಘೋಷಿಸಿದ್ದೆ. ಆದರೆ, ದೇಶದ ವಿವಿಧ ಭಾಗಗಳಿಂದ ಸ್ಪರ್ಧಿಸುವಂತೆ ಒತ್ತಡ ಬಂದಿದೆ. ಹೀಗಾಗಿ ಎಲ್ಲಿ ಸ್ಪರ್ಧಿಸಬೇಕೆಂದು ನಿರ್ಧರಿಸಿಲ್ಲ. ಚುನಾವಣಾ ರಾಜಕಾರಣದ ಆಚೆಗೂ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬಹುದು. ಆದರೂ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದರ ಕುರಿತು ಶೀಘ್ರವೆ ಪ್ರಕಟಿಸಲಿದ್ದೇನೆಂದು ಅವರು ತಿಳಿಸಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಕಾಂಗ್ರೆಸ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಜಯಪ್ರಕಾಶ್ ಹೆಗ್ಡೆ ಹಾಗೂ ಒಬ್ಬ ಮಹಿಳಾ ಅಭ್ಯರ್ಥಿಯ ಹೆಸರು ಕೇಳಿ ಬರುತ್ತಿದೆ. ಹೀಗಾಗಿ ಕಾಂಗ್ರೆಸ್-ಜೆಡಿಎಸ್ ನಾಯಕರ ಒಮ್ಮತದ ಅಭ್ಯರ್ಥಿಯನ್ನು ಕಣಕಿಳಿಸಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.

ಜೆಡಿಎಸ್, ಕಾಂಗ್ರೆಸ್‌ನ ಯಾವ ನಾಯಕರೂ ಮೈತ್ರಿ ಕುರಿತು ಅಪಸ್ವರ, ಒಡಕು ಮೂಡುವಂತಹ ಹೇಳಿಕೆಗಳನ್ನು ನೀಡಬಾರದು. ಎರಡು ಪಕ್ಷಗಳಿಂದ ಮಾಧ್ಯಮಗಳಿಗೆ ಹೇಳಿಕೆ ನೀಡಲು ವಕ್ತಾರರನ್ನು ನೇಮಿಸಲಾಗುವುದು. ಯಾರು ಕೂಡ ಪ್ರತ್ಯೇಕ ಹೇಳಿಕೆ ಕೊಡಬಾರದು. ಒಮ್ಮತದ ಅಭಿಪ್ರಾಯಗಳೆ ವ್ಯಕ್ತವಾಗಬೇಕು.

-ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News