ಕಾಂಗ್ರೆಸ್-ಜೆಡಿಎಸ್ ಪ್ರಮುಖರ ಸಭೆಗೆ ಪರಮೇಶ್ವರ್ ಗೈರು: ತುಮಕೂರು ಕೈ ತಪ್ಪಿದ್ದಕ್ಕೆ ಬೇಸರ ?

Update: 2019-03-19 15:29 GMT

ಬೆಂಗಳೂರು, ಮಾ.19: ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಲೋಕಸಭಾ ಚುನಾವಣೆಯ ಸೀಟುಗಳ ಹಂಚಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಸಂಸದರಿದ್ದ ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದರಿಂದ ಕಾಂಗ್ರೆಸ್ ನಾಯಕತ್ವದ ವಿರುದ್ಧ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಬೇಸರಗೊಂಡಿದ್ದಾರೆ ಎನ್ನಲಾಗಿದೆ.

ಇದಕ್ಕೆ ಪುಷ್ಟಿ ನೀಡುವಂತೆ ಇಂದು ನಗರದ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಪ್ರಮುಖ ನಾಯಕರ ಸುದ್ದಿಗೋಷ್ಠಿಯಲ್ಲಿ ಭಾಗವಹಿಸದೆ, ಪರಮೇಶ್ವರ್ ದೂರ ಉಳಿಯುವ ಮೂಲಕ ತಮ್ಮ ಬೇಸರ ಹೊರಹಾಕಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಪತ್ರಿಕಾಗೋಷ್ಠಿಗೆ ಮುನ್ನ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಚಿವ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಸಭೆ ನಡೆಸಿದ್ದರು.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ 2 ಕ್ಷೇತ್ರಗಳಲ್ಲಿ ಜೆಡಿಎಸ್ ಸಂಸದರಿದ್ದಾರೆ. ಈ ಚುನಾವಣೆಗೆ ಸೀಟುಗಳ ಹಂಚಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್‌ಗೆ 20 ಹಾಗೂ ಜೆಡಿಎಸ್‌ಗೆ 8 ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ. ಇದಕ್ಕೂ ಮುನ್ನ ಹಾಲಿ ಸಂಸದರು ಇರುವ ಕ್ಷೇತ್ರಗಳಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಮುಖಂಡರು ಹೇಳುತ್ತಲೇ ಬಂದಿದ್ದರು. ಆದರೆ, ಅಂತಿಮವಾಗಿ ಕಾಂಗ್ರೆಸ್ ಸಂಸದರು ಪ್ರತಿನಿಧಿಸುತ್ತಿರುವ ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದು, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ಗೆ ಮುಜುಗರ ಉಂಟು ಮಾಡಿದೆ.

ಈ ಹಿನ್ನೆಲೆಯಲ್ಲಿ ತುಮಕೂರು ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ವಶಕ್ಕೆ ತೆಗೆದುಕೊಳ್ಳಲು ಪರಮೇಶ್ವರ್, ಕಾಂಗ್ರೆಸ್ ಹೈಕಮಾಂಡ್, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆದರೆ, ಅವರ ಯಾವುದೇ ಪ್ರಯತ್ನ ಯಶಸ್ಸು ಸಾಧಿಸಿಲ್ಲ. ಇದರಿಂದಾಗಿ, ಅಸಮಾಧಾನಗೊಂಡಿರುವ ಪರಮೇಶ್ವರ್, ಇಂದಿನ ಪ್ರಮುಖರ ಸಭೆಗೆ ಗೈರು ಹಾಜರಾಗಿ ದೂರು ಉಳಿದಿದ್ದರು ಎಂದು ಹೇಳಲಾಗುತ್ತಿದೆ.

‘ಪೂರ್ವ ನಿಯೋಜಿತ ಕಾರ್ಯಕ್ರಮವಿತ್ತು’

ಕುಟುಂಬದಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮವಿದ್ದ ಕಾರಣ ಇಂದು ಕಾಂಗ್ರೆಸ್-ಜೆಡಿಎಸ್ ಪಕ್ಷದ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಮೈತ್ರಿ ಪಕ್ಷದ ಹಿರಿಯ ನಾಯಕರೆಲ್ಲಾ ಸೇರಿ ಚುನಾವಣೆಯ ಸಂಬಂಧ ಹಲವು ಸಭೆ ನಡೆಸಿ ರಣತಂತ್ರ ರೂಪಿಸಿದ್ದೇವೆ. ಅಂತೆಯೇ ಜಂಟಿಯಾಗಿ ಚುನಾವಣೆಗೆ ದುಡಿಯಲಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಟ್ವಿಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News