ಭಿನ್ನಾಭಿಪ್ರಾಯ ಮರೆತು ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಸೂಚನೆ: ಸಿದ್ದರಾಮಯ್ಯ

Update: 2019-03-19 16:02 GMT

ಬೆಂಗಳೂರು, ಮಾ.19: ಜೆಡಿಎಸ್-ಕಾಂಗ್ರೆಸ್‌ನ ಕಾರ್ಯಕರ್ತರು ತಮ್ಮ ನಡುವಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಒಗ್ಗಟ್ಟಿನಿಂದ ಪ್ರಚಾರ ಮಾಡಬೇಕೆಂದು ಈಗಾಗಲೆ ಎರಡು ಪಕ್ಷಗಳ ಶಾಸಕರಿಗೆ, ಜಿಲ್ಲಾ, ತಾಲೂಕು ಅಧ್ಯಕ್ಷರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ರಾಜ್ಯ ಸರಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ದಾರೆ. 

ನಗರದ ಅಶೋಕ್ ಹೊಟೇಲ್‌ನಲ್ಲಿ ಆಯೋಜಿಸಿದ್ದ ಕಾಂಗ್ರೆಸ್-ಜೆಡಿಎಸ್ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಸಮ್ಮಿಶ್ರ ಸರಕಾರ ರಚನೆಗೊಂಡ ಸಂದರ್ಭದಲ್ಲಿಯೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಲಾಗಿತ್ತು ಎಂದು ತಿಳಿಸಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರಕಾರದ ನಂತರದಲ್ಲಿ ನಡೆದ 3 ಲೋಕಸಭೆ ಹಾಗೂ ಎರಡು ವಿಧಾನಸಭೆಯ ಉಪ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರವನ್ನು ಹೊರತು ಪಡಿಸಿ ಉಳಿದ ಐದು ಕ್ಷೇತ್ರಗಳಲ್ಲಿ ಮೈತ್ರಿ ಸರಕಾರದ ಪಕ್ಷಗಳು ಭಾರಿ ಅಂತರದಲ್ಲಿ ಜಯಗಳಿಸಿವೆ. ಶಿವಮೊಗ್ಗದಲ್ಲಿ ಕೇವಲ 50ಸಾವಿರ ಮತಗಳ ಅಂತರದಲ್ಲಿ ಸೋತಿದ್ದೇವೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸುವುದರಲ್ಲಿ ಯಾವುದೆ ಅನುಮಾನವಿಲ್ಲವೆಂದು ಅವರು ಹೇಳಿದರು.

ರಾಜ್ಯದಲ್ಲಿ ಜಾತ್ಯತೀತ ಚಿಂತನೆವುಳ್ಳವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ, ಈ ಮತಗಳು ಕಾಂಗ್ರೆಸ್-ಜೆಡಿಎಸ್‌ಗೆ ವಿಭಜನೆಗೊಂಡು ಬಿಜೆಪಿ ಗೆಲುವಿಗೆ ಕಾರಣವಾಗುತ್ತಿತ್ತು. ಹೀಗಾಗಿ ಈ ಮತಗಳು ವಿಭಜನೆಗೊಳ್ಳುವುದು ಬೇಡ. ಕೋಮುವಾದಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಏಕೈಕ ಉದ್ದೇಶದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ ಎಂದು ಅವರು ಸ್ಪಷ್ಟಪಡಿಸಿದರು.

ಒಗ್ಗಟ್ಟಾಗಿ ಪ್ರಚಾರ: ಮೈತ್ರಿ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೆರಡು ದಿನಗಳಲ್ಲಿ ಘೋಷಣೆ ಮಾಡುತ್ತೇವೆ. ರಾಜ್ಯದ ಎಲ್ಲ ಜಿಲ್ಲಾ ಘಟಕದ ಅಧ್ಯಕ್ಷರು, ಕಾರ್ಯಕರ್ತರು ಸೇರಿದಂತೆ ಎಲ್ಲರಿಗೂ ಜೊತೆಯಾಗಿ ಕೆಲಸಮಾಡುವಂತೆ ಎರಡು ಪಕ್ಷಗಳ ವತಿಯಿಂದ ಕಟ್ಟು ನಿಟ್ಟಿನ ಸೂಚನೆ ಹೋಗಲಿದೆ. ಎರಡು ಪಕ್ಷಗಳ ನಾಯಕರು ಭಿನ್ನಾಭಿಪ್ರಾಯ ಮರೆತು ಬಿಜೆಪಿ ವಿರುದ್ಧ ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.

ವೀಕ್ಷಕರು ನೇಮಕ: ಕಾಂಗ್ರೆಸ್, ಜೆಡಿಎಸ್ ಮೈತ್ರಿಯನ್ನು ಲೋಕಸಭಾ ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ರೂಪಿಸುವ ಸಲುವಾಗಿ ಜಂಟಿಯಾಗಿ ಪ್ರಚಾರ ಮಾಡಲು ಉದ್ದೇಶಿಸಲಾಗಿದೆ. ರಾಹುಲ್‌ ಗಾಂಧಿ, ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಒಂದೇ ವೇದಿಕೆಯಲ್ಲಿ ಪ್ರಚಾರ ಮಾಡಲಿದ್ದಾರೆ. ಹಾಗೂ ಇದಕ್ಕೆ ಅನುಕೂಲವಾಗುವಂತೆ ಪ್ರತಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್‌ನಿಂದ ಒಬ್ಬೊಬ್ಬರನ್ನು ವೀಕ್ಷಕರನ್ನಾಗಿ ನೇಮಿಸಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು.

ಜಂಟಿ ಸುದ್ದಿಗೋಷ್ಟಿಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಜೆಡಿಎಸ್ ಮುಖಂಡ ಕುಪೇಂದ್ರ ರೆಡ್ಡಿ ಉಪಸ್ಥಿತರಿದ್ದರು.

ಮಾ.31ರಂದು ಐತಿಹಾಸಿಕ ಸಭೆ

ಮಾ.31ರಂದು ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ಐತಿಹಾಸಿಕ ಸಾರ್ವಜನಿಕ ಸಭೆ ಏರ್ಪಡಿಸುವ ಮೂಲಕ ಚುನಾವಣಾ ರಣಕಹಳೆ ಮೊಳಗಿಸಲಿದ್ದೇವೆ. ಈ ಸಮಾವೇಶವನ್ನು ಬೆಂಗಳೂರು ಮೈಸೂರು ರಸ್ತೆಯ ಆಸುಪಾಸಿನಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಈ ಸಮಾವೇಶದ ಮೂಲಕ ಬಿಜೆಪಿ ವಿರುದ್ಧದ ಮೈತ್ರಿ ಪಕ್ಷಗಳ ಒಗ್ಗಟ್ಟಿನ ಶಕ್ತಿಯನ್ನು ದೇಶಕ್ಕೆ ರವಾನಿಸಲಿದ್ದೇವೆ.

-ಸಿದ್ದರಾಮಯ್ಯ ಸಮನ್ವಯ ಸಮಿತಿಯ ಅಧ್ಯಕ್ಷ

ಕರ್ನಾಟಕದಿಂದಲೇ ದೇಶಕ್ಕೆ ಸಂದೇಶ

ಒಂದೆರಡು ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿಗೆ ಸಂಬಂಧಪಟ್ಟಂತೆ ಸಣ್ಣಪುಟ್ಟ ಸಮಸ್ಯೆಗಳಿವೆ. ಅದನ್ನು ಸಿದ್ದರಾಮಯ್ಯ ಹಾಗೂ ದೇವೇಗೌಡರು ಮಾತಾಡಿ ಬಗೆಹರಿಸುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದಲೇ ದೇಶಕ್ಕೆ ಒಂದು ಉತ್ತಮ ಸಂದೇಶ ರವಾನೆಯಾಗಬೇಕಿದೆ. ಹೀಗಾಗಿ ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ.

-ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News