ಬಾಬಾಬುಡನ್‍ಗಿರಿ ದರ್ಗಾ ಉರೂಸ್‍ಗೆ ಬಿಗಿ ಬಂದೋಬಸ್ತ್: ಎಸ್ಪಿ ಹರೀಶ್ ಪಾಂಡೆ

Update: 2019-03-20 12:41 GMT

ಚಿಕ್ಕಮಗಳೂರು, ಮಾ.20: ಪ್ರತೀ ವರ್ಷದಂತೆ ಈ ವರ್ಷವೂ ಬಾಬಾಬುಡನ್ ಗಿರಿ ದರ್ಗಾದಲ್ಲಿ ಮಾ.22ರಿಂದ 24ರವರೆಗೆ ಉರೂಸ್ ನಡೆಯಲಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಉರೂಸ್‍ಗೆ ಕಳೆದ ಬಾರಿಗಿಂತ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು ಎಂದ ಅವರು, ಕೆಎಸ್‍ಆರ್‍ಪಿ ತುಕಡಿ, ರಿಸರ್ವ್ ಪೊಲೀಸ್ ತುಕಡಿ, ಪೇದೆ, ಮುಖ್ಯಪೇದೆ, ಅಧಿಕಾರಿಗಳನ್ನು ಬಾಬಾಬುಡನ್‍ಗಿರಿಯಲ್ಲಿ ಭದ್ರತೆಗೆ ನಿಯೋಜಿಲಸಲಾಗುವುದು. ಬಾಬಾಬುಡನ್ ಗಿರಿ ಸೇರಿದಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಅಹಿಕತ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಕಟ್ಟೆಚ್ಚರ ವಹಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಸಾಮರಸ್ಯ ಕದಡುವ ಘಟನೆಗಳು ಈ ಹಿಂದೆ ನಡೆದಿವೆ. ಈ ಹಿನ್ನೆಲೆಯಲ್ಲಿ ಆಲ್ದೂರು, ಹಾಂದಿ, ಸಂಗಮೇಶ್ವರಪೇಟೆ, ಖಾಂಡ್ಯ ಸೇರಿದಂತೆ ಅನೇಕ ಗ್ರಾಮಗಳಲ್ಲಿ ದಿನದ 24 ಗಂಟೆಯೂ ಪೊಲೀಸರನ್ನು ನಿಯೋಜನೆ ಮಾಡಲಾಗುವುದು ಎಂದ ಅವರು, ಕಳೆದ ವರ್ಷ ಉರೂಸ್‍ಗೆ ತೆರಳುತ್ತಿದ್ದಾಗ ಕೆಲವೆಡೆ ವಾಹನ ದಟ್ಟಣೆ ಹೆಚ್ಚಾಗಿ ತೊಂದರೆಯಾಗಿತ್ತು. ಈ ಬಾರಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಆಯ್ದ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.

ಇತ್ತೀಚೆಗೆ ಕೈಮರ ಚೆಕ್‍ಪೋಸ್ಟ್ ಬಳಿ ಚಿತ್ರದುರ್ಗದಿಂದ ಬಂದಿದ್ದ ಪ್ರವಾಸಿಗರಲ್ಲಿ ಓರ್ವ ಯುವಕ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅದೇ ಸಂದರ್ಭದಲ್ಲಿ ಕೆಲವರು ಸ್ಥಳೀಯರೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆಯೂ ನಡೆದಿದೆ. ಅದಕ್ಕೆ ಸಂಬಂಧಪಟ್ಟಂತೆ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದ ಅವರು, ಚುನಾವಣೆ ಹಿನ್ನೆಲೆಯಲ್ಲಿ ಈವರೆಗೂ 1008 ರೌಡಿಶೀಟರ್ ಗಳಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಚುನಾವಣಾ ಅಕ್ರಮದಲ್ಲಿ ತೊಡಗುವುದು ಸೇರಿದಂತೆ ಯಾವುದೇ ವ್ಯಕ್ತಿ ಕೋಮು ಸೌಹಾರ್ದ, ಸಾಮರಸ್ಯಕ್ಕೆ ಧಕ್ಕೆ ತರುವ ಕೆಲಸ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News