ಕಟ್ಟಡ ಕುಸಿತ ಪ್ರಕರಣದ ನಿಷ್ಪಕ್ಷಪಾತ ತನಿಖೆ: ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ- ಸಚಿವ ದೇಶಪಾಂಡೆ

Update: 2019-03-20 16:08 GMT

ಧಾರವಾಡ, ಮಾ.20: ಕುಮಾರೇಶ್ವರ ನಗರದದಲ್ಲಿ ಮಂಗಳವಾರ ಮಧ್ಯಾಹ್ನ ನಿರ್ಮಾಣ ಹಂತದಲ್ಲಿದ್ದ ವಾಣಿಜ್ಯ ಕಟ್ಟಡ ಕುಸಿತಗೊಂಡು ಹಲವಾರು ಜನ ಗಾಯಗೊಂಡು, ಕೆಲವರು ಪ್ರಾಣ ಕಳೆದುಕೊಂಡಿರುವುದು ದುರಾದೃಷ್ಟದ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಬುಧವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯಾಚರಣೆ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇಶಪಾಂಡೆ, ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಗಾಯಾಳುಗಳಿಗೆ ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆಗಳಡಿಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಕಟ್ಟಡ ಕುಸಿತ ಪ್ರಕರಣದ ಮಾಹಿತಿ ದೊರೆತ ತಕ್ಷಣವೇ ಸ್ಥಳೀಯ ಪೊಲೀಸರು, ಜಿಲ್ಲಾಡಳಿತ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿ, ಸಿಬ್ಬಂದಿ ವರ್ಗ ಕಾರ್ಯಾಚರಣೆ ಆರಂಭಿಸಿವೆ ಎಂದರು.

45 ಜನರ ಎಸ್‌ಡಿಆರ್‌ಎಫ್ ತಂಡ, ಐವರು ಎನ್‌ಡಿಆರ್‌ಎಫ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪರಿಹಾರ ಕೆಲಸ ಚುರುಕುಗೊಳಿಸಿ ಬೆಳಗಿನ ಜಾವದವರೆಗೆ ಸುಮಾರು 54 ಜನರನ್ನು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗೆ ಘಾಜಿಯಾಬಾದ್‌ನಿಂದ 73 ಜನರನ್ನೊಳಗೊಂಡ ಪರಿಣಿತ ಎನ್‌ಡಿಆರ್‌ಎಫ್ ತಂಡ ಆಗಮಿಸಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ದೇಶಪಾಂಡೆ ತಿಳಿಸಿದರು.

ನಿರ್ದಾಕ್ಷಿಣ್ಯ ಕ್ರಮ: ಕಟ್ಟಡಕ್ಕೆ ಪರವಾನಿಗೆ ನೀಡುವ ಹಂತ, ತಾಂತ್ರಿಕ ದೋಷ ಅಥವಾ ಯಾವುದೇ ಲೋಪಗಳಿದ್ದರೂ ಕೂಡಾ ತಜ್ಞರನ್ನೊಳಗೊಂಡ ಸಮಿತಿಯಿಂದ ನಿಷ್ಪಕ್ಷಪಾತ ತನಿಖೆ ನಡೆಸಿ ನಿರ್ದಾಕ್ಷಿಣ್ಯವಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ಈಗ ಅವಶೇಷಗಳಡಿಯಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ರಕ್ಷಿಸುವುದು ಮತ್ತು ಗಾಯಗೊಂಡವರಿಗೆ ಚಿಕಿತ್ಸೆ ಒದಗಿಸುವುದು ಮೊದಲ ಆದ್ಯತೆಯಾಗಿದೆ ಎಂದು ದೇಶಪಾಂಡೆ ಹೇಳಿದರು.

ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 35 ಜನ ಗಾಯಾಳುಗಳು ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ದಾಖಲಾಗಿರುವ 6 ಜನ ಹಾಗೂ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ 13 ಗಾಯಾಳುಗಳನ್ನು ಸಚಿವರಾದ ದೇಶಪಾಂಡೆ, ಸಿ.ಎಸ್.ಶಿವಳ್ಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಎಚ್.ಕೋನರೆಡ್ಡಿ, ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಜಿಲ್ಲಾಧಿಕಾರಿ ದೀಪಾ ಚೋಳನ್, ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಡಿಐಜಿ ರವಿಕಾಂತೇಗೌಡ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News