ಕೃಷ್ಣಾ-ಭೀಮಾ ನದಿಗಳಿಗೆ ನೀರು ಹರಿಸಲು ಮಹಾರಾಷ್ಟ್ರಕ್ಕೆ ರಾಜ್ಯ ಸರಕಾರ ಮನವಿ

Update: 2019-03-21 13:02 GMT

ಬೆಂಗಳೂರು, ಮಾ. 21: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳಗಾವಿ, ವಿಜಯಪುರ, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆ ಜನರಿಗೆ ಕುಡಿಯುವ ನೀರಿಗಾಗಿ ಕೋಯ್ನೆ ಹಾಗೂ ಉಜ್ಜನಿ ಅಣೆಕಟ್ಟೆಯಿಂದ ಕೃಷ್ಣಾ-ಭೀಮಾ ನದಿಗಳಿಗೆ ನೀರು ಹರಿಸಬೇಕೆಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಕುಡಿಯುವ ನೀರಿಗಾಗಿ ಜನತೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದುದರಿಂದ ಕೂಡಲೇ ಮಹಾರಾಷ್ಟ್ರ ಸರಕಾರ ನೀರು ಬಿಡುಗಡೆಗೆ ಕ್ರಮ ಕೈಗೊಳ್ಳಬೇಕೆಂದು ಶಿವಕುಮಾರ್ ಮನವಿ ಮಾಡಿದ್ದಾರೆ.

ಜನವರಿ 16ರಂದು ಔರಂಗಾಬಾದ್‌ನಲ್ಲಿ ನಡೆದ ಅಂತರ್‌ರಾಷ್ಟ್ರೀಯ ಸೂಕ್ಷ್ಮ ನೀರಾವರಿ ವಿಚಾರ ಸಂಕಿರಣದ ವೇಳೆ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿನ ಭೀಕರ ಬರ ಪರಿಸ್ಥಿತಿ ಕುರಿತು ಚರ್ಚೆ ಮಾಡಿದ್ದು, ನಿಮಗೆ ನೆನಪಿದೆ ಎಂದು ಭಾವಿಸುತ್ತೇನೆ. ಎಲ್ಲರಿಗೂ ತಿಳಿದಿರುವಂತೆ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿದೆ. ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಂಗಾರಿನ ಮಳೆ ಕೊರತೆಯಿಂದ ತೀರ ಕೆಟ್ಟ ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚಾಗಿದೆ.

ಮಹಾರಾಷ್ಟ್ರ ಈ ಹಿಂದೆಯೂ ಇಂತಹ ಕಠಿಣ ಪರಿಸ್ಥಿತಿಯಲ್ಲಿ ಜನರು ಹಾಗೂ ಪ್ರಾಣಿ ಪಕ್ಷಿಗಳಿಗೆ ಅನುಕೂಲವಾಗಲು ಕರ್ನಾಟಕಕ್ಕೆ ಕುಡಿಯಲು ನೀರು ಹರಿಸಿತ್ತು. ಹೀಗಾಗಿ ಈ ಬಾರಿಯೂ ಮಾನವೀಯತೆ ಆಧಾರದ ಮೇಲೆ ಕೊಯ್ನೆದಿಂದ ಕೃಷ್ಣ ನದಿಗೆ 2ಟಿಎಂಸಿ ಹಾಗೂ ಉಜ್ಜನಿಯಿಂದ ಭೀಮಾ ನದಿಗೆ 2 ಟಿಎಂಸಿ ನೀರನ್ನು ಹರಿಸಬೇಕೆಂದು ಶಿವಕುಮಾರ್ ಪತ್ರದಲ್ಲಿ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News