ಧಾರವಾಡದಲ್ಲಿ ಬಹುಮಹಡಿ ಕಟ್ಟಡ ಕುಸಿತ: ನ್ಯಾಯಾಂಗ ತನಿಖೆ ಬದ್ಧ- ಸಿಎಂ ಕುಮಾರಸ್ವಾಮಿ

Update: 2019-03-21 15:04 GMT

ಬೆಂಗಳೂರು/ಧಾರವಾಡ, ಮಾ.21: ಧಾರವಾಡದಲ್ಲಿ ಬಹುಮಹಡಿ ವಾಣಿಜ್ಯ ಸಂಕಿರ್ಣ ಕಟ್ಟಡ ಕುಸಿದು ಬಿದ್ದು, ಹಲವಾರು ಮೃತಪಟ್ಟಿರುವ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆ ನಡೆಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಗುರುವಾರ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಅವರು, ಅವಶೇಷಗಳಡಿ ಸಿಲುಕಿರುವ ಸಂತ್ರಸ್ತರ ಬಂಧುಗಳೊಂದಿಗೆ ಮಾತುಕತೆ ನಡೆಸಿ, ಸಾಂತ್ವನ ಹೇಳಿದರು. ಬಳಿಕ ಜಿಲ್ಲಾ ಆಸ್ಪತ್ರೆ ಮತ್ತು ಸತ್ತೂರಿನ ಎಸ್‌ಡಿಎಂ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿ, ಸುದ್ದಿಗಾರರೊಂದಿಗೆ ಅವರು ಮಾತನಡಿದರು.

ಮಂಗಳವಾರ ಮಧ್ಯಾಹ್ನ ನಿರ್ಮಾಣ ಹಂತದಲ್ಲಿದ್ದ ವಾಣಿಜ್ಯ ಕಟ್ಟಡವೊಂದು ಕುಸಿದ ತಕ್ಷಣ ರಕ್ಷಣಾ ಕಾರ್ಯಾಚರಣೆ ತ್ವರಿತವಾಗಿ ಆರಂಭಿಸಿ ಇದುವರೆಗೆ 54 ಜನರ ಜೀವ ರಕ್ಷಣೆ ಮಾಡಲಾಗಿದೆ. 12 ಜನ ಮೃತಪಟ್ಟಿದ್ದಾರೆ ಎಂದು ಬೇಸರ ವ್ಯಕ್ತವ್ಯಕ್ತಪಡಿಸಿದರು.

ಅವಶೇಷಗಳಡಿ ಇನ್ನೂ ಸುಮಾರು 14 ಜನ ಇರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯ ಮುಂದುವರೆಯಲಿದೆ. ಘಟನೆ ಕುರಿತು ಮ್ಯಾಜಿಸ್ಟ್ರೇಟ್ ಹಂತದ ತನಿಖೆ ನಡೆಸಲು ಸೂಚಿಸಲಾಗಿದೆ. ಅಗತ್ಯ ಬಿದ್ದರೆ ಇನ್ನೂ ಉನ್ನತ ತನಿಖೆಗೂ ಸರಕಾರ ಸಿದ್ಧವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಧಾರವಾಡದಲ್ಲಿ ನಡೆದ ಈ ಘಟನೆ ಆಘಾತಕಾರಿಯಾಗಿದೆ. ಸಂಭವಿಸಿದ ತಕ್ಷಣ ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸುವ ಅಧಿಕಾರ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ವಹಿಸಲಾಗಿದೆ ಎಂದರು.

ಈ ವೇಳೆ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಎಚ್.ಕೋನರೆಡ್ಡಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News