ತುಮಕೂರು ಕ್ಷೇತ್ರದಿಂದ ಸ್ಪರ್ಧೆಗೆ ದೇವೇಗೌಡ ಒಲವು: ಬೆಂ.ಉತ್ತರಕ್ಕೆ ಬಿ.ಎಲ್ ಶಂಕರ್ ಅಭ್ಯರ್ಥಿ?

Update: 2019-03-21 15:16 GMT

ಬೆಂಗಳೂರು, ಮಾ.21: ತುಮಕೂರು ಅಥವಾ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಪೈಕಿ ಯಾವುದಾದರೂ ಒಂದು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಹಿಂದಿನಿಂದಲೂ ಕೇಳಿ ಬರುತ್ತಿದ್ದವು. ಇದೀಗ, ಅಂತಿಮವಾಗಿ ತುಮಕೂರು ಕ್ಷೇತ್ರದಿಂದಲೇ ಕಣಕ್ಕಿಳಿಯಲು ದೇವೇಗೌಡ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಜೆಡಿಎಸ್ ಪಾಲಾಗಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಮುಖಂಡ ಡಾ.ಬಿ.ಎಲ್.ಶಂಕರ್ ಅಥವಾ ಸಚಿವ ಕೃಷ್ಣಭೈರೇಗೌಡರನ್ನು ಕಣಕ್ಕಿಳಿಸುವ ಕುರಿತು ಜೆಡಿಎಸ್ ಪಾಳಯದಲ್ಲಿ ಚರ್ಚೆ ಆರಂಭವಾಗಿದೆ ಎನ್ನಲಾಗಿದೆ.

ಇತ್ತೀಚೆಗಷ್ಟೇ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು, ಕೃಷ್ಣಭೈರೇಗೌಡ ನಿವಾಸದಲ್ಲಿ ಸಭೆ ಸೇರಿ, ದೇವೇಗೌಡರು ಅಭ್ಯರ್ಥಿಯಾದರೆ ಯಾವ ರೀತಿಯಲ್ಲಿ ಚುನಾವಣಾ ಪ್ರಚಾರ ಮಾಡಬೇಕು. ಅವರ ಗೆಲುವಿಗೆ ಯಾವ ರೀತಿಯ ರಣತಂತ್ರ ರೂಪಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿತ್ತು.

ಒಂದು ವೇಳೆ ದೇವೇಗೌಡರು ಈ ಕ್ಷೇತ್ರದಿಂದ ಕಣಕ್ಕಿಳಿಯದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕ್ಷೇತ್ರವನ್ನು ಬಿಟ್ಟುಕೊಡಬೇಕು ಎಂದು ಕಾಂಗ್ರೆಸ್ ಶಾಸಕರು ಒತ್ತಾಯಿಸಿದ್ದರು. ಒಂದು ವೇಳೆ ಈ ಕ್ಷೇತ್ರ ಕಾಂಗ್ರೆಸ್ ಪಾಲಾದರೆ, ಮೈತ್ರಿ ಕೂಟದ ಅಭ್ಯರ್ಥಿ ಜೆಡಿಎಸ್ ಚಿಹ್ನೆಯಡಿಯಲ್ಲಿಯೇ ಸ್ಪರ್ಧಿಸಬೇಕು ಎಂಬ ಬೇಡಿಕೆಯಿಟ್ಟಿದೆ ಎಂದು ತಿಳಿದು ಬಂದಿದೆ.

ಅದರಂತೆ, ಸಚಿವ ಕೃಷ್ಣಭೈರೇಗೌಡ ಸ್ಪರ್ಧಿಸಲು ಹಿಂದೇಟು ಹಾಕಿದರೆ, ಮೂಲತಃ ಜನತಾ ಪರಿವಾರದ ಒಕ್ಕಲಿಗ ಸಮುದಾಯದ ಕಾಂಗ್ರೆಸ್ ಮುಖಂಡ ಡಾ.ಬಿ.ಎಲ್.ಶಂಕರ್‌ರನ್ನು ಕಣಕ್ಕಿಳಿಸಲು ಜೆಡಿಎಸ್ ಒಲವು ಹೊಂದಿದೆ ಎಂದು ಹೇಳಲಾಗುತ್ತಿದೆ. ಈ ವಿಚಾರದ ಕುರಿತು ಚರ್ಚೆ ನಡೆಸಲು ದೇವೇಗೌಡರು ಇಂದು ಕೃಷ್ಣಭೈರೇಗೌಡ ನಿವಾಸಕ್ಕೆ ಭೇಟಿ ನೀಡಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

ದೇವೇಗೌಡರು ಚುನಾವಣೆಯಲ್ಲಿ ಸ್ಪರ್ಧಿಸಬೇಕೋ, ಬೇಡವೋ ಎಂಬ ಅನುಮಾನದಲ್ಲಿದ್ದಾರೆ. ಹಾಸನದಿಂದಲೇ ಸ್ಪರ್ಧಿಸಲು ಅವರು ಆಸಕ್ತಿ ಹೊಂದಿದ್ದರು. ಆದರೆ, ಆ ಕ್ಷೇತ್ರವನ್ನು ಪ್ರಜ್ವಲ್‌ಗೆ ಬಿಟ್ಟುಕೊಟ್ಟಿದ್ದಾರೆ. ಇದೀಗ, ಬೆಂಗಳೂರು ಉತ್ತರ ಅಥವಾ ತುಮಕೂರು ಲೋಕಸಭಾ ಕ್ಷೇತ್ರದ ಪೈಕಿ ಯಾವುದಾದರೂ ಒಂದು ಕ್ಷೇತ್ರದಿಂದ ಸ್ಪರ್ಧಿಸಬಹುದು.

-ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News