ಬೆಳೆ ವಿಮೆ ನಷ್ಟ ಪರಿಹಾರ ಕೋರಿ ಅರ್ಜಿ: ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2019-03-21 18:11 GMT

ಬೆಂಗಳೂರು, ಮಾ.21: ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ರೈತರಿಗೆ 2016ನೆ ಸಾಲಿನ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ನಷ್ಟ ಪರಿಹಾರ ಶೀಘ್ರ ವಿಲೇವಾರಿ ಮಾಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ಯಾದಗಿರಿ ಜಿಲ್ಲೆಯ ಅಖಂಡ ಕರ್ನಾಟಕ ರೈತ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲ ಕ್ಲಿಫ್ಟನ್ ಡಿ. ರೊಝರಿಯೊ ಅವರು, ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಸಮಯಕ್ಕೆ ಅನುಸಾರವಾಗಿ ಮಳೆ ಬಾರದ ಹಿನ್ನೆಲೆಯಲ್ಲಿ ರೈತರ ಸಾಕಷ್ಟು ಬೆಳೆ ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿಯೆ ರೈತರು ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ರೈತರಿಗೆ 2016ರ ಸಾಲಿನ ಫಸಲ್ ಬಿಮಾ ಯೋಜನೆಯಡಿಯ ಬೆಳೆ ವಿಮೆ ಇನ್ನೂ ಬಂದಿಲ್ಲ. ಹೀಗಾಗಿ, ಈ ತಾಲೂಕಿನ ರೈತರು ಆರ್ಥಿಕ ಸಂಕಷ್ಟಕ್ಕೆ ಸೀಲುಕಿ ಆತ್ಮಹತ್ಯೆ ಕಡೆಗೆ ಮುಖ ಮಾಡುತ್ತಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೈತರಿಗೆ 2016ನೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಬೆಳೆ ವಿಮೆ ನಷ್ಟ ಪರಿಹಾರವನ್ನು ನೀಡಬೇಕೆಂದು ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News