ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ಕೊಡಗು ಜಿಲ್ಲಾಧಿಕಾರಿ ಸೂಚನೆ

Update: 2019-03-21 18:32 GMT

ಮಡಿಕೇರಿ, ಮಾ.21: ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಆರೋಗ್ಯ ಸೇವೆ ಕಲ್ಪಿಸಬೇಕೆಂದು ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕೊಡಗು ಜಿಲ್ಲಾ ವೈದ್ಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೈದ್ಯರಿಲ್ಲದ ಆಸ್ಪತ್ರೆಗಳಿಗೆ ಆಯುಷ್ ವೈದ್ಯರನ್ನು ನಿಯೋಜಿಸಬೇಕೆಂದು ಸಲಹೆ ನೀಡಿದರು. ಜಿಲ್ಲೆಯ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ದೊರೆಯಬೇಕು. ಯಾವುದೇ ರೀತಿಯ ದೂರುಗಳು ಕೇಳಿ ಬರಬಾರದು. ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸದ್ಯ ಜಿಲ್ಲೆಯ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಬೇಕು. ವೈದ್ಯರಿಗೆ ತುಟ್ಟಿಭತ್ತೆ ಮತ್ತು ಪ್ರಯಾಣ ಭತ್ತೆ ನೀಡಲು ಆದೇಶದಲ್ಲಿಯೇ ನಮೂದಿಸಬೇಕೆಂದು ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ವೈದ್ಯರ ಕೊರತೆ ಇರುವ ಸಮುದಾಯ ಆಸ್ಪತ್ರೆಗಳಿಗೆ ವೈದ್ಯರನ್ನು ನಿಯೋಜಿಸುವುದರ ಜೊತೆಗೆ ಎಲ್ಲಾ ವೈದ್ಯರನ್ನು ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಬೇಕು. ತಾರತಮ್ಯ ಅನುಸರಿಸಬಾರದು ಎಂದು ಮುಖ್ಯವೈಧ್ಯಾಧಿಕಾರಿಗೆ ಕಡಕ್ ಸೂಚನೆ ನೀಡಿದರು. ಚುನಾವಣೆ ಮುಗಿದ ನಂತರ ಮಳೆಗಾಲ ಆರಂಭವಾಗಲಿದ್ದು, ವಿಪತ್ತು ಎದುರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಜ್ಜಾಗಬೇಕು. ಆ ನಿಟ್ಟಿನಲ್ಲಿ ಈಗಿನಿಂದಲೇ ಯೋಜನೆ ರೂಪಿಸಬೇಕು ಎಂದು ಅನೀಸ್ ಕಣ್ಮಣಿ ಜಾಯ್ ಸಲಹೆ ನೀಡಿದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಮಾಹಿತಿ ನೀಡಿ, ಜಿಲ್ಲೆಯಲ್ಲಿ ತಜ್ಞ ವೈದ್ಯರ 20 ಹುದ್ದೆಗಳು, 9 ಸಾಮಾನ್ಯ ವೈದ್ಯರು, ಒಬ್ಬರು ದಂತ ವೈದ್ಯರ ಹುದ್ದೆಗಳು ಖಾಲಿ ಇವೆ. ಸಮುದಾಯ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಇದ್ದು, ಈ ಆಸ್ಪತ್ರೆಗಳಿಗೆ ಹೆಚ್ಚುವರಿ ವೈದ್ಯರನ್ನು ನಿಯೋಜಿಸಲು ಪ್ರಯತ್ನಿಸಲಾಗಿದೆ ಎಂದು ಅವರು ತಿಳಿಸಿದರು. ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು, ಮತ್ತೊಬ್ಬ ವೈದ್ಯರು ಆಸ್ಪತ್ರೆಗೆ ಬಂದ ನಂತರ ತೆರಳಬೇಕು. ಆ ನಿಟ್ಟಿನಲ್ಲಿ ತಾಲೂಕು ವೈದ್ಯಾಧಿಕಾರಿಗಳು ಗಮನಹರಿಸಬೇಕೆಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು.  

ವಿಪತ್ತು ನಿರ್ವಹಣೆ ಸಂಬಂಧ ಈಗಾಗಲೇ ಯೋಜನೆ ರೂಪಿಸಲಾಗುತ್ತಿದ್ದು, ಮಡಿಕೇರಿ ತಾಲೂಕಿಗೆ 3, ಸೋಮವಾರಪೇಟೆ 2 ಮತ್ತು ವಿರಾಜಪೇಟೆ ತಾಲೂಕಿನಲ್ಲಿ 1 ತಂಡ ನಿಯೋಜಿಸಲಾಗುತ್ತದೆ. ಅಲ್ಲದೆ, ಮೈಸೂರು, ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಿಂದ ಹೆಚ್ಚುವರಿ ವೈದ್ಯರನ್ನು ಕರೆಸಿಕೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಾಹಿತಿ ನೀಡಿದರು.

ತಾಲೂಕು ವೈದ್ಯಾಧಿಕಾರಿಗಳಾದ ಡಾ.ಎ.ಸಿ.ಶಿವಕುಮಾರ್, ಡಾ.ಯತಿರಾಜು, ಡಾ.ಶ್ರೀನಿವಾಸ್, ಕಾರ್ಯಕ್ರಮ ಅಧಿಕಾರಿಗಳಾದ ಡಾ.ಆನಂದ್, ಡಾ.ಶಿವಕುಮಾರ್, ವಿವಿಧ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಕುಟ್ಟ ಆಸ್ಪತ್ರೆಗೆ ಹೆಚ್ಚುವರಿ ವೈದ್ಯರ ನಿಯೋಜನೆ
ಜಿಲ್ಲೆಯ ಕುಟ್ಟ ಸಮುದಾಯ ಆಸ್ಪತ್ರೆ ಸೇರಿದಂತೆ ಹಲವು ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಇಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿದೆ. ಆದ್ದರಿಂದ ಹೆಚ್ಚುವರಿ ವೈದ್ಯರನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿ ಜಿಲ್ಲಾ ಮುಖ್ಯ ವೈದ್ಯಾಧಿಕಾರಿಗೆ ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News