ಜಲ ಸಂರಕ್ಷಣೆಗೆ ಅನುದಾನ ಮೀಸಲು ಅಗತ್ಯ: ಸಿಂಧೂ ರೂಪೇಶ್

Update: 2019-03-22 15:21 GMT

ಉಡುಪಿ, ಮಾ.22: ಜಿಲ್ಲೆಯಲ್ಲಿ ಜಲ ಸಂರಕ್ಷಣೆಕೈಗೊಳ್ಳುವ ಉದ್ದೇಶದಿಂದ ಜಿಲ್ಲೆಯ ಶಾಲೆಗಳು, ಹಾಸ್ಟೆಲ್‌ಗಳು ಮತ್ತು ಸರಕಾರಿ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವಿಧಾನಗಳನ್ನು ಅಳವಡಿಸಬೇಕಾದ ಅಗತ್ಯವಿದೆ. ಅದೇ ರೀತಿ ಜಲ ಸಂರಕ್ಷಣೆಗಾಗಿ ಪ್ರತಿ ವರ್ಷ ಎಲ್ಲ ಇಲಾಖೆಗಳು ತಮ್ಮ ಅನುದಾನದಲ್ಲಿ ಸ್ವಲ್ಪ ಪ್ರಮಾಣವನ್ನು ಮೀಸಲಿಡಬೇಕು ಎಂದು ಉಡುಪಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.

ಮಣಿಪಾಲ ರಜತಾದ್ರಿಯಲ್ಲಿರುವ ಉಡುಪಿ ಜಿಪಂ ಕಚೇರಿ ಎದುರು ಶುಕ್ರ ವಾರ ಗಿಡ ನೆಟ್ಟು ನೀರುಣಿಸುವ ಮೂಲಕ ಜಲ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬಳಿಕ ಜಿಪಂ ಸಭಾಂಗಣದಲ್ಲಿ ನಡೆದ ಕಾರ್ಯಕ್ರವುದಲ್ಲಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಸುಮಾರು 15 ನದಿಗಳಿದ್ದರೂ ಕೂಡ ಬೇಸಿಗೆಯಲ್ಲಿ ಟ್ಯಾಂಕರ್ ಮೂಲಕ ನೀರು ವಿತರಿಸಲು ಪ್ರತಿವರ್ಷ ಕೋಟ್ಯಾಂತರ ಹಣ ವ್ಯಯಿಸುತ್ತಿರುವುದು ವಿಷಾಧನೀಯ. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿಯಲ್ಲಿ ಅತೀ ಹೆಚ್ಚು ಮಳೆ ಬೀಳುತ್ತದೆ. ಆದರೂ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಟ್ಯಾಂಕರ್ ನೀರನ್ನು ಅವಲಂಬಿಸಬೇಕಾಗುತ್ತದೆ ಎಂದರು.

ಮಳೆ ನೀರನ್ನು ಸರಿಯಾದ ಪ್ರಮಾಣದಲ್ಲಿ ಇಂಗಿಸಿ, ಮಳೆ ನೀರು ಕೊಯ್ಲು ವಿಧಾನವನ್ನು ಸಮರ್ಪಕವಾಗಿ ಅಳವಡಿಸಿಕೊಂಡರೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬಹುದಾಗಿದೆ. ಜೊತೆಗೆ ಜಲ ಸಂರಕ್ಷಣೆ ಕೂಡ ಸಾಧ್ಯವಾಗುತ್ತದೆ. ಜಲ ಸಂರಕ್ಷಣೆಯ ಕಾರ್ಯ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗಿರದೆ, ವರ್ಷ ಪೂರ್ತಿ ಪ್ರತೀ ದಿನ ನಿರಂತರವಾಗಿ ನಡೆಯಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಉಡುಪಿಯಲ್ಲಿ ಕಳೆದ 20-30 ವರ್ಷದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಇರಲಿಲ್ಲ, ಇತ್ತೀಚಿನ ವರ್ಷಗಳಲ್ಲಿ ಕಂಡು ಬರುತ್ತಿರುವ ಬಗ್ಗೆ ಚಿಂತಿಸಬೇಕಾಗಿದೆ. ನೀರಿನ ಅಸಮರ್ಪಕ ಬಳಕೆ, ಅಪವ್ಯಯ ತಪ್ಪಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ. ಅಂರ್ತಜಲ ವೃದ್ಧಿಗೆ ಪ್ರತಿಯೊಬ್ಬರೂ ತಮ್ಮ ಕೊಡುಗೆ ನೀಡಬೇಕು ಎಂದು ಸಿಇಓ ಹೇಳಿದರು.

ಜಲ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿಯನ್ನು ಈ ಸಂದರ್ಭದಲ್ಲಿ ಬೋಧಿಸಲಾಯಿತು. ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಸಾಮಾಜಿಕ ಅರಣ್ಯ ಇಲಾಖೆಯ ಡಿಎಫ್‌ಓ ಭಾಸ್ಕರ್, ಆರ್‌ಎಫ್‌ಓ ರವೀಂದ್ರ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News