ತುಮಕೂರು ಲೋಕಸಭಾ ಕ್ಷೇತ್ರದಿಂದ ಎಚ್.ಡಿ ದೇವೇಗೌಡ ಕಣಕ್ಕೆ

Update: 2019-03-23 12:55 GMT

ಬೆಂಗಳೂರು, ಮಾ. 23: ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದು, ಮಾ.25ರಂದು ಮಧ್ಯಾಹ್ನ ನಾಮಪತ್ರ ಸಲ್ಲಿಸುವುದಾಗಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಶನಿವಾರ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸೂತ್ರದ ಅನ್ವಯ ನಮ್ಮ ಪಕ್ಷಕ್ಕೆ ಸಿಕ್ಕಿರುವ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ ಎಂದರು.

ತುಮಕೂರು, ಮಂಡ್ಯ, ಹಾಸನ, ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ವಿಜಯಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಸರು ಅಂತಿಮಗೊಳಿಸುವುದು ಬಾಕಿಯಿದೆ ಎಂದು ದೇವೇಗೌಡ ಹೇಳಿದರು.

ಬೆಂಗಳೂರು ಉತ್ತರ ಹಾಗೂ ತುಮಕೂರು ಲೋಕಸಭಾ ಕ್ಷೇತ್ರಗಳ ಪೈಕಿ ಯಾವುದಾದರೂ ಒಂದು ಕ್ಷೇತ್ರದಿಂದ ದೇವೇಗೌಡ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಅಂತಿಮವಾಗಿ ತುಮಕೂರು ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಯಲು ಅವರು ನಿರ್ಧರಿಸಿದ್ದಾರೆ.

ಮುಖಂಡರೊಂದಿಗೆ ಸಭೆ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ತುಮಕೂರು ಲೋಕಸಭಾ ಕ್ಷೇತ್ರದ ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಇನ್ನಿತರ ನಾಯಕರನ್ನು ನಿನ್ನೆ ತಮ್ಮ ನಿವಾಸಕ್ಕೆ ಕರೆಸಿಕೊಂಡ ದೇವೇಗೌಡ, ಲೋಕಸಭಾ ಚುನಾವಣೆಯ ಸ್ಪರ್ಧೆ ಕುರಿತು ಸಮಾಲೋಚನೆ ನಡೆಸಿದರು.

ಇದೇ ವೇಳೆ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ವೇಳೆ ಲಕ್ಷಾಂತರ ಜನರನ್ನು ಸೇರಿಸಿ ಸಮಾವೇಶ ಮಾಡುವ ಮೂಲಕ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಶ್ ವಿರುದ್ಧ ಶಕ್ತಿ ಪ್ರದರ್ಶನ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಸಭೆಯಲ್ಲಿ ಸಚಿವ ಎಸ್.ಆರ್.ಶ್ರೀನಿವಾಸ್, ಶಾಸಕರಾದ ಬಿ.ಸತ್ಯನಾರಾಯಣ, ಗೌರಿಶಂಕರ್, ವೀರಭದ್ರಯ್ಯ, ಮಾಜಿ ಶಾಸಕರಾದ ತಿಮ್ಮರಾಯಪ್ಪ, ನಾಗರಾಜಯ್ಯ, ಸುಧಾಕರ್ ಲಾಲ್, ಸುರೇಶ್ ಬಾಬು, ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಬಂಡಾಯದ ಬಿಸಿ

ತುಮಕೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಮುದ್ದಹನುಮೇಗೌಡ, ಸೋಮವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ನಿರ್ಧಾರ ಕೈಗೊಂಡಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡಗೆ ಮಿತ್ರ ಪಕ್ಷದಿಂದ ಬಂಡಾಯದ ಬಿಸಿ ಎದುರಾಗುವುದು ನಿಶ್ಚಿತ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News