ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ: ಸಿ.ಟಿ.ರವಿ ಸಹಿತ 14 ಮಂದಿ ಪೊಲೀಸ್ ವಶಕ್ಕೆ; ಜಾಮೀನು

Update: 2019-03-23 17:20 GMT

ಚಿಕ್ಕಮಗಳೂರು, ಮಾ.23: ಸಾರ್ವಜನಿಕರಿಗೆ ಸೂಕ್ತ ರೀತಿಯಲ್ಲಿ ಮರಳು ವಿತರಣೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದ ಸಂದರ್ಭ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ ಸಂಬಂಧ ಶಾಸಕ ಸಿ.ಟಿ.ರವಿ ಸೇರಿದಂತೆ 14 ಮಂದಿ ಬಿಜೆಪಿ ಕಾರ್ಯಕರ್ತರನ್ನು ಬೆಂಗಳೂರು ನಗರದ ಚುನಾಯಿತ ಸಂಸದರು, ಶಾಸಕರ ಮೇಲಿನ ಮೊಕದ್ದಮೆ ವಿಚಾರಣೆ ಮಾಡುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಆರೋಪಿಗಳನ್ನು ಬೆಳಗಿನಿಂದ ಸಂಜೆವರೆಗೂ ವಶಕ್ಕೆ ಪಡೆದಿದ್ದ ಘಟನೆ ಶನಿವಾರ ನಡೆದಿದೆ.

ಕಳೆದ 2014ರಲ್ಲಿ ಚಿಕ್ಕಮಗಳೂರು ವಿಧಾನಸಭೆ ಕ್ಷೇತ್ರದ ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ಜಿಲ್ಲೆಯ ಬಿಜೆಪಿ ಮುಖಂಡರು, ಜಿಪಂ, ತಾಪಂ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾರ್ವಜನಿಕರಿಗೆ ಮರಳು ವಿತರಣೆಗೆ ಅಧಿಕಾರಿಗಳು ಅಡ್ಡಿ ಪಡಿಸುತ್ತಿದ್ದಾರೆಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಿ.ಟಿ.ರವಿ ಹಾಗೂ ಬಿಜೆಪಿ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಒಳಗೆ ಹೋಗಿ ಪ್ರತಿಭಟನೆ ಮಾಡಿ ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಸಿದ್ದ ಆರೋಪದ ಮೇರೆಗೆ ಆಗಿನ ಚಿಕ್ಕಮಗಳೂರು ಎಸ್ಪಿ ಚೇತನ್ ಅವರು ಶಾಸಕ ಸಿ.ಟಿ.ರವಿ ಸೇರಿದಂತೆ ಒಟ್ಟು 32 ಮಂದಿ ಬಿಜೆಪಿ ಮುಖಂಡರು, ಕಾರ್ಯಕರ್ತರ ವಿರುದ್ಧ ನಗರದ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ಬೆಂಗಳೂರು ನಗರದಲ್ಲಿರುವ ಚುನಾಯಿತ ಸಂಸದರು, ಶಾಸಕರ ಮೇಲಿನ ಮೊಕದ್ದಮೆ ವಿಚಾರಣೆ ಮಾಡುವ ವಿಶೇಷ ನ್ಯಾಯಾಲಯದಲ್ಲಿ ಆರಂಭವಾಗಿತ್ತು. ಪ್ರಕರಣದ ಆರೋಪಿಗಳು ಆಗಾಗ್ಗೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಪ್ಪಿಸಿಕೊಂಡಿದ್ದರೆಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಇತ್ತೀಚೆಗೆ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು ಎನ್ನಲಾಗಿದೆ.

ಶನಿವಾರ ಶಾಸಕ ಸಿ.ಟಿ.ರವಿ ಸೇರಿದಂತೆ 14 ಮಂದಿ ಬಿಜೆಪಿ ಮುಖಂಡರು ನ್ಯಾಯಾಲಯಕ್ಕೆ ವಿಚಾರಣೆಗೆ ಆಗಮಿಸಿದ್ದ ವೇಳೆ ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಕ್ಷನ್ ನ್ಯಾಯಾಧೀಶ ರಾಮಚಂದ್ರ ಡಿ ಉದಾರ್, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಸಂಜೆ ವರೆಗೂ ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.

ಚಿಕ್ಕಮಗಳೂರು ವಿಧಾನಸಭೆ ಕ್ಷೇತ್ರದ ಶಾಸಕ ಸಿ.ಟಿ.ರವಿಯೊಂದಿಗೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭೆ ಸದಸ್ಯ ಎಚ್.ಡಿ.ತಮ್ಮಯ್ಯ, ಬಿಜೆಪಿ ವಕ್ತಾರ ವರಸಿದ್ದಿ ವೇಣುಗೋಪಾಲ್, ನಗರ ಬಿಜೆಪಿ ಅಧ್ಯಕ್ಷ ಕೋಟೆ ರಂಗನಾಥ್, ಮುಖಂಡರಾದ ಅನಿಲ್ ಕೋಟೆ, ನಿಂಗೇಗೌಡ, ಸಂತೋಷ್ ಕೋಟ್ಯಾನ್, ಮಧುಕುಮಾರ್ ರಾಜ್ ಅರಸ್, ಮಲ್ಲಿಕಾರ್ಜುನ್ ಹಾಗೂ ಈ ಹಿಂದೆ ಬಿಜೆಪಿಯಲ್ಲಿದ್ದು, ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಗೊಂಡಿರುವ ರೇಖಾ ಹುಲಿಯಪ್ಪಗೌಡ ಅವರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದರೆಂದು ತಿಳಿದು ಬಂದಿದೆ. ಬಂಧನವಾಗುವ ವಿಷಯ ಮೊದಲೇ ಅರಿತಿದ್ದ ಆರೋಪಿಗಳು ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರೆಂದು ತಿಳಿದು ಬಂದಿದ್ದು, ಸಂಜೆ ವೇಳೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದರೆಂದು ತಿಳಿದು ಬಂದಿದೆ.

ಸಾರ್ವಜನಿಕರ ಜೊತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ 2014ರಲ್ಲಿ ಪ್ರತಿಭಟನೆ ಮಾಡಿದ ಸಂದರ್ಭದಲ್ಲಿ, ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಚಿಕ್ಕಮಗಳೂರು ನಗರ ಠಾಣೆಯಲ್ಲಿ 32ಜನರ ವಿರುದ್ಧ ದೂರು ದಾಖಲಿಸಿದ್ದರು. ಕಳೆದ ಡಿಸೆಂಬರ್‌ನಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರಕಾರ ಬಂದ ನಂತರ ದೂರಿನ ದಾಖಲೆಯನ್ನು ಮತ್ತೆ ಪರಿಶೀಲನೆ ಮಾಡಿಸಿ ಪೊಲೀಸರ ಮೇಲೆ ಒತ್ತಡ ಹೇರಿ ಪುನಃ ವಿಚಾರಣೆಗೆ ಒಳಪಡಿಸಿದ್ದಾರೆ.

-ವರಸಿದ್ದ ವೇಣುಗೋಪಾಲ್, ಬಿಜೆಪಿ ವಕ್ತಾರ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News