''ರಮಾನಾಥ ರೈ ನೇತೃತ್ವದಲ್ಲಿ ದ.ಕ. ಕಾಂಗ್ರೆಸ್-ಜೆಡಿಎಸ್ ಜಂಟಿ ಚುನಾವಣಾ ಸಮಿತಿ ರಚನೆ''

Update: 2019-03-24 09:06 GMT

ಮಂಗಳೂರು, ಮಾ.24: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯನ್ನು ಎದುರಿಸಲು ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್-ಜೆಡಿಎಸ್ ಜಂಟಿ ಚುನಾವಣಾ ಸಮಿತಿ ರಚನೆ ಮಾಡಲಾಗುವುದು ಎಂದು ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.

  ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್- ಜೆಡಿಎಸ್ ಜಿಲ್ಲಾಧ್ಯಕ್ಷರು ಜಂಟಿ‌ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರು ಜಂಟಿ ಸಭೆ, ಸಮಾವೇಶ ಹಾಗೂ ಮತಯಾಚನೆ ಮಾಡುತ್ತೇವೆ. ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಸೋಲಿಸುವುದೇ ನಮ್ಮ‌ ಗುರಿ. 27 ವರ್ಷಗಳ ಕಾಲ ಬಿಜೆಪಿ ಕೈಯಲ್ಲಿದ್ದ ಕ್ಷೇತ್ರವನ್ನು ಕೈವಶ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಯುವ ನಾಯಕತ್ವಕ್ಕೆ ಮಣೆ ಹಾಕಿದ್ದು, ಮಿಥುನ್ ರೈಯವರನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ.  ಮಾರ್ಚ್ 25ರ ಸೋಮವಾರ ಬೆಳಗ್ಗೆ 10:30ಕ್ಕೆ ಪುರಭವನದಲ್ಲಿ ಜಂಟಿ ಸಮಾವೇಶ ನಡೆಸಿದ ಬಳಿಕ ನಾಮಪತ್ರ ಸಲ್ಲಿಸಲಾಗುವುದು ಎಂದರು.

ಜೆಡಿಎಸ್ ಅಧ್ಯಕ್ಷ ವಿಟ್ಲ‌ ಮುಹಮ್ಮದ್ ಕುಂಞಿ ಮಾತನಾಡಿ, ನಳಿನ್ ಕುಮಾರ್ ಅವರನ್ನು ಸೋಲಿಸುವುದೇ ನಮ್ಮ ಗುರಿ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಮಾಜಿ ಸಚಿವರಾದ ಬಿ.ರಮಾನಾಥ ರೈ,‌ ಅಮರನಾಥ ಶೆಟ್ಟಿ, ಅಭಯಚಂದ್ರ ಜೈನ್, ಅಭ್ಯರ್ಥಿ ಮಿಥುನ್ ರೈ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ಮಾಜಿ ಶಾಸಕರಾದ ಮೊಯ್ದಿನ್ ಬಾವಾ, ‌ಜೆ.ಆರ್.ಲೋಬೋ, ಕಾಂಗ್ರೆಸ್ ಮುಖಂಡರಾದ ಕಣಚೂರು ಮೋನು, ಧನಂಜಯ ಅಡ್ಪಂಗಾಯ, ಜೆಡಿಎಸ್ ಮುಖಂಡ ಎಂ.ಬಿ.ಸದಾಶಿವ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News