×
Ad

ಬೆಂಗಳೂರು ದಕ್ಷಿಣ ಕ್ಷೇತ್ರ: 20 ವರ್ಷಗಳ ಬಳಿಕ ಬಿ.ಕೆ.ಹರಿಪ್ರಸಾದ್ ಸ್ಪರ್ಧೆ

Update: 2019-03-24 19:47 IST

ಬೆಂಗಳೂರು, ಮಾ. 25: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಹಾಲಿ ಸದಸ್ಯರೂ ಆಗಿರುವ ಬಿ.ಕೆ.ಹರಿಪ್ರಸಾದ್ ಅವರಿಗೆ ಕೊನೆಯ ಕ್ಷಣದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ದಕ್ಕಿದೆ.

ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ವಹಿಸಿಕೊಳ್ಳುವ ಮೂಲಕ ಪಕ್ಷವನ್ನು ಮುನ್ನಡೆಸಿದ ಹಾಗೂ ಹಲವು ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿದ ಹೆಗ್ಗಳಿಕೆ ಹರಿಪ್ರಸಾದ್ ಅವರ ಬೆನ್ನಿಗಿದೆ. ಹಿಂದುಳಿದ ವರ್ಗಗಳ ಪ್ರಬಲ ನಾಯಕರೂ ಆಗಿರುವ ಹರಿಪ್ರಸಾದ್, ಸೈದ್ಧಾಂತಿಕ ಸ್ಪಷ್ಟತೆಯುಳ್ಳ ಅಪರೂಪದ ರಾಜಕಾರಣಿ.

ಬಿಜೆಪಿಯ ಪ್ರಾಬಲ್ಯವಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದು, ಬಿಜೆಪಿಗೆ ಪ್ರಬಲ ಪೈಪೋಟಿ ನೀಡಲಿದ್ದಾರೆ.

20 ವರ್ಷಗಳ ನಂತರ ಕಣಕ್ಕೆ: 1999ರಲ್ಲಿ ಬಿಜೆಪಿ ಅಭ್ಯರ್ಥಿ ಅನಂತ ಕುಮಾರ್ ವಿರುದ್ಧ ಸ್ಪರ್ಧಿಸಿದ್ದ ಹರಿಪ್ರಸಾದ್ 65 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದರು. ಅನಂತರ ಬೆಂಗಳೂರು ದಕ್ಷಿಣ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಹರಿಪ್ರಸಾದ್, 20 ವರ್ಷಗಳ ಬಳಿಕ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಪತ್ನಿ ತೇಜಸ್ವಿನಿ ವಿರುದ್ಧ ಸ್ಪರ್ಧಿಸಲಿದ್ದು, ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News