ಬೆಂಗಳೂರು ಗ್ರಾಮಾಂತರ: ಮತ್ತೊಮ್ಮೆ ಗೆಲುವಿನ ನಿರೀಕ್ಷೆಯಲ್ಲಿ ಡಿ.ಕೆ.ಸುರೇಶ್

Update: 2019-03-24 14:34 GMT

ಬೆಂಗಳೂರು, ಮಾ. 24: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿ.ಕೆ.ಸುರೇಶ್ ಈ ಬಾರಿಯ ಲೋಕಸಭಾ ಚುಣಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ 6,52,723 ಮತಗಳನ್ನು ಪಡೆಯುವುದರ ಮೂಲಕ 2,31,480 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದರು. ಇವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಪಿ.ಮುನಿರಾಜು ಗೌಡ 4,21, 243 ಮತ ಹಾಗೂ ಜೆಡಿಎಸ್ ಅಭ್ಯರ್ಥಿ ಆರ್.ಪ್ರಭಾಕರ ರೆಡ್ಡಿ 3,17,870 ಮತಗಳನ್ನು ಪಡೆದು ಸೋಲು ಕಂಡಿದ್ದರು.

ಬೆಂ.ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ, ಕುಣಿಗಲ್ ಕ್ಷೇತ್ರಗಳು ಕಾಂಗ್ರೆಸ್‌ನ ಭದ್ರ ನೆಲೆಗಳಾಗಿದ್ದು, 2014ರ ಚುನಾವಣೆಯಲ್ಲಿಯೂ ಡಿ.ಕೆ.ಸುರೇಶ್‌ಗೆ ಹೆಚ್ಚು ಮತಗಳು ಬಂದಿದ್ದವು. ಈ ಬಾರಿ ಕಾಂಗ್ರೆಸ್-ಜೆಡಿಎಸ್‌ನ ಒಮ್ಮತದ ಅಭ್ಯರ್ಥಿಯಾಗಿರುವುದರಿಂದ ರಾಜರಾಜೇಶ್ವರಿನಗರ, ಬೆಂಗಳೂರು ದಕ್ಷಿಣ ಹಾಗೂ ಆನೇಕಲ್ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಹೆಚ್ಚು ಮತಗಳು ಬರುವ ನಿರೀಕ್ಷೆಯಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ, ಪರಿಶಿಷ್ಟ ಜಾತಿ ಹಾಗೂ ರೆಡ್ಡಿ ಸಮುದಾಯದ ಮತಗಳು ಹೆಚ್ಚಾಗಿವೆ. ಇದರಲ್ಲಿ ಪರಿಶಿಷ್ಟ ಜಾತಿಯ ಮತಗಳು ಮೊದಲಿನಿಂದಲೂ ಕಾಂಗ್ರೆಸ್‌ನೊಂದಿಗೆ ಇವೆ. ಇನ್ನು ಒಕ್ಕಲಿಗ ಮತಗಳು ಕಾಂಗ್ರೆಸ್- ಜೆಡಿಎಸ್‌ಗೆ ಹಂಚಿ ಹೋಗಿತ್ತು. ಆದರೆ, ಈ ಬಾರಿ ಜೆಡಿಎಸ್ ಅಭ್ಯರ್ಥಿ ಇಲ್ಲದ ಕಾರಣ ಈ ಮಾತಗಳು ಕಾಂಗ್ರೆಸ್ ಪಾಲಾಗಲಿವೆ. ಇವೆಲ್ಲವುಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News