×
Ad

ಉಡುಪಿ ಜಿಲ್ಲೆಯಾದ್ಯಂತ 1745 ರೌಡಿ ಶೀಟರ್‌ಗಳ ಪರೇಡ್

Update: 2019-03-24 22:14 IST

ಕುಂದಾಪುರ, ಮಾ. 24: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯ ಒಟ್ಟು 1745 ರೌಡಿ ಶೀಟರ್‌ಗಳನ್ನು ಕರೆಸಿ ಪರೇಡ್ ನಡೆಸಲಾಯಿತು.

ರವಿವಾರ ಕುಂದಾಪುರ ನಗರ ಪೊಲೀಸ್ ಠಾಣೆ ಆವರಣದಲ್ಲಿ ಕುಂದಾಪುರ ಉಪ ವಿಭಾಗದ ಡಿವೈಎಸ್ಪಿ ಬಿ.ಪಿ.ದಿನೇಶ್ ಕುಮಾರ್ ನೇತೃತ್ವದಲ್ಲಿ ಸುಮಾರು 50ಕ್ಕೂ ಅಧಿಕ ರೌಡಿ ಶೀಟರ್‌ಗಳ ಪರೇಡ್ ನಡೆಸಲಾಯಿತು. ಕುಂದಾಪುರ ವೃತ್ತ ನಿರೀಕ್ಷಕ ಮಂಜಪ್ಪ, ನಗರ ಠಾಣೆ ಎಸ್ಸೈ ಹರೀಶ್ ಆರ್. ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಯಾವುದೇ ರೀತಿಯಲ್ಲಿ ಧಕ್ಕೆಯಾಗದಂತೆ ನಡೆದು ಕೊಳ್ಳಬೇಕು. ಶಾಂತಿಯುತ ಚುನಾವಣೆಗೆ ಸಹಕರಿಸಬೇಕು. ಅಹಿತರಕರ ಘಟನೆ ನಡೆದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರಗಿಸಲಾಗುವುದು ಎಂದು ರೌಡಿಗಳಿಗೆ ಎಚ್ಚರಿಕೆ ನೀಡಲಾಯಿತು.

‘ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್‌ಗಳನ್ನು ಕರೆಸಿ ಪರೇಡ್ ನಡೆಸಲಾಗಿದೆ. ಇಂದು ಕುಂದಾಪುರ ಹಾಗೂ ಬೈಂದೂರಿನಲ್ಲಿ ನಡೆಸಲಾಗಿದೆ. ಹೀಗೆ ಜಿಲ್ಲೆಯಾದ್ಯಂತ 1745 ರೌಡಿ ಶೀಟರ್‌ಗಳನ್ನು ಕರೆಸಿ ಪರೇಡ್ ನಡೆಸಲಾಗಿದೆ’ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಶಾ ಜೇಮ್ಸ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News