ಪ್ರಜಾಪ್ರಭುತ್ವಕ್ಕೆ ಧಕ್ಕೆ ಬರದಂತೆ ಕಾಯುವುದು ನಾಗರಿಕರ ಕರ್ತವ್ಯ: ಸಂತೋಷ್ ಹೆಗ್ಡೆ

Update: 2019-03-26 15:28 GMT

ಬೆಂಗಳೂರು, ಮಾ.26: ಪ್ರಜಾಪ್ರಭುತ್ವಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳುವುದು ಯಾವುದೇ ರಾಜಕೀಯ ಪಕ್ಷದ ಜವಾಬ್ದಾರಿ ಮಾತ್ರವಲ್ಲದೆ. ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ತಿಳಿಸಿದರು.

ಮಂಗಳವಾರ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ಮಾಧ್ಯಮ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ, ದೇಶದಲ್ಲಿ ಜನಪರ, ಜವಾಬ್ದಾರಿಯುತ ರಾಜಕೀಯ ಇದ್ದರೆ ನಿಜವಾದ ಪ್ರಜಾಪ್ರಭುತ್ವ ಇರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಪ್ರತಿಯೊಬ್ಬರು ಜವಾಬ್ದಾರಿಯುತವಾಗಿ ಮತ ಚಲಾಯಿಸಬೇಕು. ಮತದಾನದ ಜವಾಬ್ದಾರಿಯನ್ನು ನಿಭಾಯಿಸದೇ ಇದ್ದರೆ ದುರಾಡಳಿತ ಕುರಿತು ಪ್ರಶ್ನೆ ಮಾಡುವ ಹಕ್ಕು ನಮಗಿರುವುದಿಲ್ಲ. ಹಾಗಾಗಿ ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿದ್ದ ಕುಲಸಚಿವ ಪ್ರೊ.ಬಿ.ಕೆ.ರವಿ ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿರಲು ಪ್ರಜ್ಞಾವಂತರು ಶಾಸನ ಸಭೆಗಳಿಗೆ ಆಯ್ಕೆಯಾಗಬೇಕು. ಈ ನಿಟ್ಟಿನಲ್ಲಿ ಜನತೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಯುವ ಮತದಾರರಿಗೆ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್ ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News