ಶ್ರೀಕೃಷ್ಣದೇವರಾಯ ವಿವಿ ಉಪಕುಲಪತಿ ಪ್ರೊ.ಸುಭಾಷ್ ವಿರುದ್ಧ ಪ್ರಕರಣ ದಾಖಲು

Update: 2019-03-26 15:39 GMT

ಬಳ್ಳಾರಿ, ಮಾ.26: ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಎಂ.ಎಸ್.ಸುಭಾಷ್ ವಿರುದ್ಧ ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅರೋಪದಡಿ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಉಪಕುಲಪತಿ ಪ್ರೊ.ಎಂ.ಎಸ್.ಸುಭಾಷ್, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ ನೇಮಕಾತಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಮಪ್ರಸಾತ್ ಮನೋಹರ, ಉಪಕುಲಪತಿಗೆ ನೋಟಿಸ್ ಜಾರಿಗೊಳಿಸಿ ಸಮಾಜಾಯಿಷಿ ನೀಡುವಂತೆ ಸೂಚಿಸಿದ್ದರು.

ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಪತ್ರವನ್ನು ಪರಿಶೀಲಿಸಿದಾಗ ಸರಕಾರಿ ಮತ್ತು ಸರಕಾರದ ಅಧೀನದ ಸಂಸ್ಥೆಗಳಲ್ಲಿನ ನೇಮಕಾತಿ ಪ್ರಕ್ರಿಯೆಯನ್ನು ಜರುಗಿಸದಂತೆ ಹಾಗೂ ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ನಡೆಯುತ್ತಿರುವ ಬೋಧಕ, ಬೋಧಕೇತರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಸಹ ಮುಂದುವರೆಸದಂತೆ ಸ್ಪಷ್ಟ ನಿರ್ದೇಶನಗಳನ್ನು ನೀಡಲಾಗಿತ್ತು. ಆದಾಗ್ಯು, ವಿವಿಯ ಉಪಕುಲಪತಿ ನೇಮಕಾತಿಯ ಸಂದರ್ಶನ ಪ್ರಕ್ರಿಯೆ ಕೈಗೊಂಡಿದ್ದಾರೆ. ಇದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ವಿವಿ ಉಪಕುಲಪತಿ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ 1950ರಡಿ ಅಪರಾಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸಹಾಯಕ ಚುನಾವಣಾಧಿಕಾರಿ ರಮೇಶ್ ಕೋನರೆಡ್ಡಿ ದೂರು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News