ಎ.23ಕ್ಕೆ ಎರಡನೆ ಹಂತದ ಲೋಕಸಮರ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಾಳೆಯಿಂದಲೇ ಆರಂಭ

Update: 2019-03-27 16:37 GMT

ಬೆಂಗಳೂರು, ಮಾ. 27: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಎ.23ರಂದು ಚುನಾವಣೆ ನಡೆಯಲಿದ್ದು ನಾಳೆ(ಮಾ.28) ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಆದರೆ, ಮೂರು ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಅಂತಿಮಗೊಳಿಸಲು ಇನ್ನೂ ಕಸರತ್ತು ನಡೆಸಿವೆ.

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ(ಮೀಸಲು), ಕಲಬುರ್ಗಿ (ಮೀಸಲು), ರಾಯಚೂರು(ಮೀಸಲು), ಬೀದರ್, ಕೊಪ್ಪಳ, ಬಳ್ಳಾರಿ(ಮೀಸಲು), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಹಾಗೂ ಶಿವಮೊಗ್ಗ ಕ್ಷೇತ್ರಗಳಿಗೆ ನಾಳೆ(ಮಾ.28)ಯಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಕಾಂಗ್ರೆಸ್-ಜೆಡಿಎಸ್ ಸೀಟು ಹಂಚಿಕೆ ಮಾಡಿಕೊಂಡಿದ್ದು, ಎರಡನೆ ಹಂತದ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳ ಪೈಕಿ ಕಾಂಗ್ರೆಸ್-11 ಮತ್ತು ಜೆಡಿಎಸ್-3 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಮೈತ್ರಿ ಪಕ್ಷಗಳು ಧಾರವಾಡ ಕ್ಷೇತ್ರವನ್ನು ಹೊರತುಪಡಿಸಿ ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಚಿಕ್ಕೋಡಿ, ರಾಯಚೂರು, ಕೊಪ್ಪಳ ಕ್ಷೇತ್ರವನ್ನು ಹೊರತುಪಡಿಸಿ ಎಲ್ಲ ಕ್ಷೇತ್ರಗಳಿಗೆ ಬಿಜೆಪಿ ಈಗಾಗಲೇ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

ದೇಶದ ಗಮನ ಸೆಳೆದಿರುವ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕಲಬುರಗಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಅವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ ಶಾಸಕ ಡಾ.ಉಮೇಶ್ ಜಾಧವ್ ಅಖಾಡಕ್ಕೆ ಇಳಿದಿದ್ದಾರೆ.

ಶಿವಮೊಗ್ಗ ಕ್ಷೇತ್ರದಿಂದ ಮಾಜಿ ಸಿಎಂ ಬಿಎಸ್‌ವೈ ಪುತ್ರ ಬಿ.ವೈ.ರಾಘವೇಂದ್ರ ಅವರ ಪ್ರತಿಸ್ಪರ್ಧಿಯಾಗಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಮೈತ್ರಿ ಅಭ್ಯರ್ಥಿಯಾಗಿದ್ದಾರೆ. ಬಳ್ಳಾರಿ ಕ್ಷೇತ್ರದಿಂದ ಹಾಲಿ ಸಂಸದ ವಿ.ಎಸ್.ಉಗ್ರಪ್ಪ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ದೇವೇಂದ್ರಪ್ಪ ಅಖಾಡದಲ್ಲಿದ್ದಾರೆ.

‘ನಾಳೆ (ಮಾ.28) ಅಧಿಸೂಚನೆ ಹೊರಬೀಳಲಿದ್ದು, ಎ.4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಎ.5ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಎ.8ರಂದು ನಾಮಪತ್ರ ಹಿಂಪಡೆಯಲು ಕೊನೆ. ಎ.23ಕ್ಕೆ ಮತದಾನ ನಡೆಯಲಿದೆ’

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News