×
Ad

ಟಿ-20: ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ವೆಟ್‌ವಾಶ್ ಸಾಧನೆ

Update: 2019-03-28 23:38 IST

ಹೊಸದಿಲ್ಲಿ, ಮಾ.28: ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎರಡನೇ ಬಾರಿ 200ಕ್ಕೂ ಅಧಿಕ ರನ್ ಗಳಿಸಿದ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ ಶ್ರೀಲಂಕಾ ತಂಡವನ್ನು 96 ರನ್‌ಗಳಿಂದ ಮಣಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡು ಕ್ಲೀನ್‌ಸ್ವೀಪ್ ಸಾಧಿಸಿದೆ.

ಡೇನಿಯಲ್ ವ್ಯಾಟ್(51,33 ಎಸೆತ) ಹಾಗೂ ಆ್ಯಮಿ ಜೋನ್ಸ್(57) ಅರ್ಧಶತಕ, ನಟಾಲಿ ಸಿವೆರ್ ಹಾಗೂ ಟಮಿ ಬೀವೌಂಟ್ ಮೂರನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ ಸೇರಿಸಿದ 108 ರನ್ ನೆರವಿನಿಂದ ಪ್ರವಾಸಿ ಇಂಗ್ಲೆಂಡ್ ತಂಡ 2 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿತು.

ಇದು ಇಂಗ್ಲೆಂಡ್ ತಂಡ ಚುಟುಕು ಮಾದರಿ ಕ್ರಿಕೆಟ್‌ನಲ್ಲಿ ಗಳಿಸಿದ ಎರಡನೇ ಗರಿಷ್ಠ ಮೊತ್ತವಾಗಿದೆ. ಕಳೆದ ವರ್ಷ ಜೂನ್‌ನಲ್ಲಿ ಟಾಂಟನ್‌ನಲ್ಲಿ ದಕ್ಷಿಣ ಆಫ್ರಿಕ ಮಹಿಳಾ ತಂಡದ ವಿರುದ್ಧ 3 ವಿಕೆಟ್ ನಷ್ಟಕ್ಕೆ 250 ರನ್ ಗಳಿಸಿ ದಾಖಲೆ ನಿರ್ಮಿಸಿತ್ತು. ಗೆಲ್ಲಲು ಕಠಿಣ ಸವಾಲು ಪಡೆದ ಶ್ರೀಲಂಕಾ ತಂಡ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 108 ರನ್ ಗಳಿಸಿದೆ. ಇಂಗ್ಲೆಂಡ್ ಸತತ 10ನೇ ಪಂದ್ಯದಲ್ಲಿ ಜಯ ಸಾಧಿಸಿ ಭಾರತ ಹಾಗೂ ಶ್ರೀಲಂಕಾ ಪ್ರವಾಸವನ್ನು ಯಶಸ್ವಿಯಾಗಿ ಪೂರೈಸಿದೆ. ಇಂಗ್ಲೆಂಡ್ ತಂಡ ಭಾರತದಲ್ಲಿ ಏಕದಿನ ಸರಣಿಯನ್ನು 0-2 ಅಂತರದಿಂದ ಸೋತಿತ್ತು. ಆದರೆ, ಟಿ-20 ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡು ಮೇಲುಗೈ ಸಾಧಿಸಿತ್ತು. ಹೀದರ್ ನೈಟ್ ಸಾರಥ್ಯದ ಇಂಗ್ಲೆಂಡ್ ತಂಡ ಉತ್ತಮ ಪ್ರದರ್ಶನ ಮುಂದುವರಿಸಿ ಏಕದಿನ ಸರಣಿಯಲ್ಲಿ ಶ್ರೀಲಂಕಾವನ್ನು 3-0 ಅಂತರದಿಂದ ಮಣಿಸಿತು. ಟಿ-20 ಸರಣಿಯಲ್ಲೂ ಕ್ಲೀನ್‌ಸ್ವೀಪ್ ಸಾಧಿಸಿದೆ.

ಇಂಗ್ಲೆಂಡ್ ತಂಡ ಜೂನ್‌ನಲ್ಲಿ ವೆಸ್ಟ್‌ಇಂಡೀಸ್ ವಿರುದ್ಧ ಸರಣಿಯ ಆತಿಥ್ಯವಹಿಸಿಕೊಳ್ಳಲಿದ್ದು, ಅದಕ್ಕೂ ಮೊದಲು ಮಹಿಳಾ ಆ್ಯಶಸ್ ಸರಣಿಯಲ್ಲಿ ಬದ್ಧ ಎದುರಾಳಿ ಆಸ್ಟ್ರೇಲಿಯವನ್ನು ಎದುರಿಸಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News