‘ಮೋದಿಯನ್ನು ವಿರೋಧಿಸುವವರು ದೇಶ ವಿರೋಧಿಗಳು’ ಎಂದ ತೇಜಸ್ವಿ ಸೂರ್ಯ ವಿರುದ್ಧ ದೂರು

Update: 2019-03-29 15:42 GMT

ಬೆಂಗಳೂರು, ಮಾ.29: ‘ಮೋದಿಯನ್ನು ವಿರೋಧಿಸುವವರು ದೇಶವನ್ನು ವಿರೋಧಿಸಿದಂತೆ’ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರ ವಿರುದ್ಧ ಬೆಂಗಳೂರು ಉತ್ತರ ಕಾಂಗ್ರೆಸ್ ಸಮಿತಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ತೇಜಸ್ವಿ ಸೂರ್ಯ ಈ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಮೋದಿಯನ್ನು ವಿರೋಧಿಸುವವರು ದೇಶವನ್ನು ವಿರೋಧಿಸಿದಂತೆ ಎಂದು ನೀಡಿರುವ ಹೇಳಿಕೆಯನ್ನು ಇದೀಗ ಸಾಮಾಜಿಕ ಜಾಲತಾಣದಲ್ಲಿ ಉದ್ದೇಶಪೂರ್ವಕವಾಗಿ ಹಂಚಿದ್ದಾರೆ ಎಂದು ದೂರಿದ್ದಾರೆ.

ಈ ಹೇಳಿಕೆಯು ಚುನಾವಣೆಯ ಸಂದರ್ಭದಲ್ಲಿ ಮತದಾರರ ಮೇಲೆ ಪರಿಣಾಮ ಬೀರಲಿದೆ. ಅಲ್ಲದೆ, ಮತದಾರರನ್ನು ಬೆದರಿಸುವ ಪ್ರಯತ್ನವಾಗಿದೆ. ಫೇಸ್‌ಬುಕ್, ಟ್ವಿಟರ್, ವಾಟ್ಸಾಪ್‌ಗಳ ಮೂಲಕ ಈ ಸಂದೇಶವನ್ನು ರವಾನೆ ಮಾಡಲಾಗುತ್ತಿದೆ ಎಂದು ಬೆಂಗಳೂರು ಉತ್ತರ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ವಕೀಲೆ ಭವ್ಯ ಅನು ಎಂಬುವವರು ಚುನಾವಣಾ ಆಯೋಗಕ್ಕೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮತದಾರರನ್ನು ಬೆದರಿಸುವ ಮೂಲಕ, ದೇಶಪ್ರೇಮದ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿರುವ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News