ಐಟಿ ಕಚೇರಿ ಮುಂಭಾಗ ಪ್ರತಿಭಟನೆ: ಕಾಂಗ್ರೆಸ್-ಜೆಡಿಎಸ್ ಮುಖಂಡರ ಮೇಲೆ ಕಾನೂನು ಕ್ರಮಕ್ಕೆ ಬಿಜೆಪಿ ಆಗ್ರಹ

Update: 2019-03-29 17:15 GMT
ಪ್ರತಿಭಟನೆ (ಫೈಲ್ ಚಿತ್ರ)

ಬೆಂಗಳೂರು, ಮಾ.29: ಚುನಾವಣಾ ಆಯೋಗದ ಅನುಮತಿ ಪಡೆಯದೆ ಆದಾಯ ತೆರಿಗೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾಂಗ್ರೆಸ್, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಒತ್ತಾಯಿಸಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಯಾವ ಸಚಿವರೂ ಚುನಾವಣಾ ಆಯೋಗದ ಅನುಮತಿ ಪಡೆಯದೆ ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವುದು ಕಾನೂನು ಉಲ್ಲಂಘನೆಯಾಗಿದೆ. ಹಾಗೂ ಸಚಿವರು ತಮ್ಮ ಭಾಷಣದ ವೇಳೆ ಅಧಿಕಾರಿಗಳ ಮೇಲೆ ಟೀಕಾಪ್ರಹಾರ ನಡೆಸಿ, ಬೆದರಿಕೆ ಒಡ್ಡಿದ್ದಾರೆ. ಹೀಗಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಬಿಜೆಪಿ ವಕ್ತಾರ ಗೋ.ಮಧುಸೂದನ್ ಆಗ್ರಹಿಸಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೀದಿಗೆ ಬಂದು ಕಾನೂನು ಮೀರಿ ಪ್ರತಿಭಟನೆ ನಡೆಸಿ ಕಾನೂನು ಸುವ್ಯವಸ್ಥೆಗೆ ಭಂಗ ತಂದಿರುವ ಕಾರಣ ರಾಜ್ಯಪಾಲರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಒಂದು ಸ್ವಾಯತ್ತ ಸಂಸ್ಥೆ ವಿರುದ್ಧ ಪ್ರತಿಭಟನೆ ನಡೆಸಿರುವ ಅಧಿಕಾರ ಇವರಿಗಿದೆಯೆ ಎಂದು ಅವರು ಪ್ರಶ್ನಿಸಿದರು.

ಭ್ರಷ್ಟರನ್ನು ಕಾಪಾಡಲು ಎಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರು ಪಣ ತೊಟ್ಟಿದ್ದಾರೆ. ಅವರು ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆಯನ್ನು ಕಳೆದುಕೊಂಡಿರುವ ಕಾರಣ ಕೂಡಲೇ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡಬೇಕು. ಈ ಪ್ರಕರಣದಲ್ಲಿ ರಾಜ್ಯಪಾಲರು ಮಧ್ಯೆ ಪ್ರವೇಶಿಸಬೇಕೆಂದು ಅವರು ಒತ್ತಾಯಿಸಿದರು.

ಐಟಿ ಅಧಿಕಾರಿಗಳು ಯಾವುದೇ ಜನಪ್ರತಿನಿಧಿಗಳ ಮೇಲೆ ದಾಳಿ ನಡೆಸಿಲ್ಲ. ಬದಲಿಗೆ ಗುತ್ತಿಗೆದಾರರು ಹಾಗೂ ಕೆಲವು ರಾಜಕಾರಣಿಗಳ ಸಂಬಂಧಿಕರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇಷ್ಟಕ್ಕೆ ಎರಡೂ ಪಕ್ಷಗಳ ನಾಯಕರು ಹೆದರಬೇಕಾದ ಅಗತ್ಯವಾದರೂ ಏನಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗುತ್ತಿಗೆದಾರರು, ಎಂಜಿನಿಯರ್‌ಗಳ ಪರ ಬೀದಿಗೆ ಇಳಿದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದೇ ಮಹಾ ಅಪರಾಧ ಎಂಬಂತೆ ಮಾತನಾಡಿರುವುದು ಸರಿಯಲ್ಲವೆಂದು ಅವರು ಹೇಳಿದರು.

ಕಳೆದ ಮೂರು ತಿಂಗಳಿನಿಂದ ಗುತ್ತಿಗೆದಾರರಿಗೆ ಎಷ್ಟು ಕಾಮಗಾರಿಗಳನ್ನು ಸರಕಾರ ನೀಡಿದೆ ಎಂಬುದನ್ನು ಬಹಿರಂಗಪಡಿಸಲಿ. ತಮ್ಮ ಆಸ್ತಿಗಳನ್ನು ರಕ್ಷಿಸಿಕೊಳ್ಳಲು ಹಾಗೂ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಹಣ ಸಿಕ್ಕಿ ಬೀಳಬಹುದೆಂಬ ಭೀತಿಯಿಂದ ಅಧಿಕಾರಿಗಳಿಗಿರುವ ತಮ್ಮ ಅಧಿಕಾರವನ್ನು ಚಲಾಯಿಸದಂತೆ ಬೆದರಿಕೆ ಹಾಕಲಾಗುತ್ತಿದೆ ಎಂದು ಅವರು ಆಪಾದಿಸಿದರು. ಪತ್ರಿಕಾಗೋಷ್ಟಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅನ್ವರ್ ಮಾನಪ್ಪಾಡಿ, ಬಿಜೆಪಿ ಸಹ ವಕ್ತಾರ ಎ.ಎಚ್.ಆನಂದ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News