ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣ: ಶಾಸಕ ಗಣೇಶ್ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ
ಬೆಂಗಳೂರು, ಮಾ.29: ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾಸಕ ಜೆ.ಎನ್.ಗಣೇಶ್ ಹೈಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಆರೋಪಿ ಗಣೇಶ್ ಬಂಧನದ ಒಂದು ವಾರದ ಬಳಿಕ ಗಣೇಶ್ ಪರ ಹಿರಿಯ ವಕೀಲರಾದ ಹನುಮಂತರಾಯಪ್ಪ ಅವರು ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ್ ಅವರು ಆದೇಶವನ್ನು ಕಾಯ್ದಿರಿಸಿ, ಬಳಿಕ ಅರ್ಜಿಯನ್ನು ವಜಾಗೊಳಿಸಿದ್ದರು. ಹೀಗಾಗಿ, ಗಣೇಶ್ ಅವರು ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಪ್ರಕರಣವೇನು: ಈಗಲ್‌ಟನ್ ರೆಸಾರ್ಟ್‌ನಲ್ಲಿ ಹೊಸಪೇಟೆ ಶಾಸಕ ಆನಂದ್‌ಸಿಂಗ್‌ಗೆ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಹಲ್ಲೆ ಮಾಡಿ ಬಳಿಕ ಕಾರಾಗೃಹ ಸೇರಿದ್ದರು. ಹಲ್ಲೆ ಬಳಿಕ ಆನಂದ್‌ಸಿಂಗ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.