ಧರ್ಮ, ಯುದ್ಧದ ಹೆಸರಿನಲ್ಲಿ ಮತ ಕೇಳುವುದು ಯಾವ ನ್ಯಾಯ:? ಮಧು ಬಂಗಾರಪ್ಪ

Update: 2019-03-29 18:39 GMT

ಶಿವಮೊಗ್ಗ, ಮಾ. 29: ಧರ್ಮ ಹಾಗೂ ಯುದ್ದದ ಹೆಸರಿನಲ್ಲಿ ಮತ ಕೇಳುವುದು ಯಾವ ನ್ಯಾಯ ಎಂದು ಶಿವಮೊಗ್ಗ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪರವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಶುಕ್ರವಾರ ನಗರದ ಪ್ರೆಸ್ ಟ್ರಸ್ಟ್ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಚುನಾವಣೆಯ ಸಮಯದಲ್ಲಿ ಐಟಿ ದಾಳಿಗಳ ಮೂಲಕ ಕಿರಿಕಿರಿ ಉಂಟು ಮಾಡಲಾಗುತ್ತಿದೆ. ಬೇಕೆಂದೇ ಈ ದಾಳಿಗಳು ನಡೆಯುತ್ತಿವೆ. ಇದು ಬಿಜೆಪಿಯ ಕುತಂತ್ರ ರಾಜಕಾರಣಕ್ಕೆ ಸಾಕ್ಷಿಯಾಗಿದೆ ಎಂದು ದೂರಿದರು. 

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲ ರಂಗಗಳಲಿಯೂ ವಿಫಲವಾಗಿದೆ. ದೇಶದ ಜನತೆಗೆ ನೀಡಿದ್ದ ಭರವಸೆ ಈಡೇರಿಸುವಲ್ಲಿ ಸೋತಿದೆ. ಸರ್ಕಾರದ ದುರಾಡಳಿತದಿಂದ ಜನಸಾಮಾನ್ಯರು ಸಂಕಷ್ಟ ಅನುಭವಿಸುತ್ತಿದ್ದಾರೆ. ನೋಟು ಅಮಾನ್ಯೀಕರಣ, ಜಿಎಸ್‍ಟಿಯಂತಹ ಅವೈಜ್ಞಾನಿಕ ನೀತಿಗಳ ಅನುಷ್ಠಾನದ ಮೂಲಕ ಬಡವರನ್ನೇ ಬಲಿ ತೆಗೆದುಕೊಂಡ ಸರ್ಕಾರ ಇದು ಎಂದು ಆರೋಪಿಸಿದರು. 

ಜಯದ ವಿಶ್ವಾಸ: ಈ ಬಾರಿಯ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ತಮ್ಮ ಗೆಲುವು ಖಚಿತವಾಗಿದೆ. ತಾವು ಈಗಾಗಲೇ ಎರಡು ಬಾರಿ ಕ್ಷೇತ್ರ ವ್ಯಾಪ್ತಿ ಪ್ರಚಾರ ನಡೆಸಿದ್ದೇನೆ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕಳೆದ ಉಪ ಚುನಾವಣೆಯಲ್ಲಿ ಸಮಯಾವಕಾಶದ ಕೊರತೆಯಿಂದ ಕ್ಷೇತ್ರ ಸುತ್ತಲು ಸಾಧ್ಯವಾಗಲಿಲ್ಲ. ಆದರೆ ಈ ಬಾರಿ ಸಮಯಾವಕಾಶ ಲಭ್ಯವಾಗಿದ್ದು, ಅತ್ಯಂತ ವ್ಯವಸ್ಥಿತವಾಗಿ ಪ್ರಚಾರ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದರು. 

ನನ್ನ ಅಣ್ಣನ ಸಮಾನರಾದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರುಗಳಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ತಮ್ಮ ಪರವಾಗಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಯಾವ ತೊಂದರೆಯೂ ಇಲ್ಲದಂತೆ, ಎರಡೂ ಪಕ್ಷಗಳ ಮುಖಂಡರು ಒಟ್ಟಾಗಿ ಚುನಾವಣೆ ಎದುರಿಸಲಿದ್ದೆವೆ ಎಂದು ಹೇಳಿದರು. 

ನಾಮಪತ್ರ: ಎ.3 ರಂದು ನಾಮಪತ್ರ ಸಲ್ಲಿಸಲು ತೀರ್ಮಾನಿಸಲಾಗಿದೆ. ಅಂದು ರಾಮಣ್ಣ ಶ್ರೇಷ್ಠಿ ಪಾರ್ಕ್‍ನಿಂದ ಮೆರವಣಿಗೆಯಲ್ಲಿ ಆಗಮಿಸಿ, ನಾಮಪತ್ರ ಸಲ್ಲಿಸಲಾಗುವುದು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜಿಲ್ಲೆಯ ಎಲ್ಲ ಕಾಂಗ್ರೆಸ್ - ಜೆಡಿಎಸ್ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News