ಹಾಸನ ಜಿಲ್ಲಾಧಿಕಾರಿ ಅಕ್ರಮ್ ಪಾಷ ವರ್ಗಾವಣೆ

Update: 2019-03-30 13:29 GMT

ಬೆಂಗಳೂರು, ಮಾ.30: ಹಾಸನ ಜಿಲ್ಲಾಧಿಕಾರಿ ಅಕ್ರಮ್ ಪಾಷ ಸೇರಿದಂತೆ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿಯಾಗಿದ್ದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಯ ಕೃಷ್ಣಾ ಮೇಲ್ದಂಡೆ ಯೋಜನೆ ಭೂ ಸ್ವಾಧೀನ ಹಾಗೂ ಪುನರ್ವಸತಿ ವಿಭಾಗದ ಆಯುಕ್ತರಾಗಿದ್ದ ಉಜ್ವಲ್ ಕುಮಾರ್ ಘೋಷ್‌ರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆಯಾಗಿದ್ದ ಎಂ.ಕನಗವಲ್ಲಿಯನ್ನು ವಿಜಯಪುರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾಗಿದ್ದ ಅಕ್ರಮ್ ಪಾಷರನ್ನು ಇತ್ತೀಚೆಗಷ್ಟೇ ಹಾಸನ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿತ್ತು. ಹಾಸನದ ಬಿಜೆಪಿ ಶಾಸಕ ಪ್ರೀತಂ ಗೌಡ ದೂರಿನ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಅಕ್ರಮ್ ಪಾಷರನ್ನು ವರ್ಗಾವಣೆ ಮಾಡಿದೆ ಎನ್ನಲಾಗಿದೆ.

ಅದೇ ರೀತಿ, ವಿಜಯಪುರ ಜಿಲ್ಲಾಧಿಕಾರಿಯಾಗಿದ್ದ ವೈ.ಎಸ್.ಪಾಟೀಲ್ ಹಾಗೂ ಬೆಳಗಾವಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ವಿರುದ್ಧವು ಪಕ್ಷಪಾತದ ದೂರುಗಳು ಚುನಾವಣಾ ಆಯೋಗಕ್ಕೆ ಸಲ್ಲಿಕೆಯಾದ ಕಾರಣದಿಂದಾಗಿ, ಮೂವರು ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News