×
Ad

ಯುವ ಮತದಾರರು ನಿರ್ಭೀತಿಯಿಂದ ಮತದಾನ ಮಾಡಿ: ಕೋಲಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್

Update: 2019-03-30 21:26 IST

ಕೋಲಾರ,ಮಾ.30: ಈ ಬಾರಿಯ ಚುನಾವಣೆಯಲ್ಲಿ ಹೆಚ್ಚು ಮತದಾನ ಆಗಬೇಕಾಗಿದ್ದು ಪ್ರತಿಯೊಬ್ಬ ಮತದಾರರು, ಮುಖ್ಯವಾಗಿ ಯುವ ಮತದಾರರು ನಿರ್ಭೀತಿಯಿಂದ ಮತದಾನ ಮಾಡಬೇಕು ಎಂದು ಕ್ಷೇತ್ರ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯಾದ ಜೆ. ಮಂಜುನಾಥ್ ಅವರು ಕರೆ ನೀಡಿದರು. 

ಕೋಲಾರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಸ್ವೀಪ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮತದಾನ ಮಾಡುವುದು ಪ್ರತಿಯೊಬ್ಬ ಮತದಾರರ ಆದ್ಯ ಕರ್ತವ್ಯವಾಗಿದೆ. ಹಾಗಾಗಿ ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಎಲ್ಲಾ ಕ್ರೀಡಾಪಟುಗಳು ಮತದಾನದ ಕುರಿತು ನಿಮ್ಮ ಮನೆ, ಗ್ರಾಮ ಮತ್ತು ಸ್ನೇಹಿತರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು. 

ಜಿಲ್ಲೆಯಲ್ಲಿ ಸುಮಾರು 29,000 ಯುವ ಹಾಗೂ ಅರ್ಹ ಮತದಾರರ ಹೆಸರುಗಳನ್ನು ಈ ಬಾರಿ ಹೊಸದಾಗಿ ಚುನಾವಣಾ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಈ ಸಂಬಂಧ ಯುವ ಮತದಾರರು ನೋಂದಣಿಯಾಗಿರುವ ಬಗ್ಗೆ ಖಾತ್ರಿ ಪಡೆಸಿಕೊಳ್ಳಿ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸ್ವತಃ ತಾವೇ ಅಣುಕು ಮತ ಯಂತ್ರದ ಮೂಲಕ ಮತದಾನ ಮಾಡುವ ಬಗ್ಗೆ ಕ್ರೀಡಾಪಟುಗಳಿಗೆ ಪ್ರಾತ್ಯಕ್ಷಿಕೆ ನೀಡಿದರು. ಬಳಿಕ, ಮತದಾನ ಪ್ರತಿಜ್ಞಾ ವಿಧಿಯನ್ನು ಭೋದಿಸಲಾಯಿತು. ಜಿಲ್ಲಾಧಿಕಾರಿಯಾದ ಜೆ. ಮಂಜುನಾಥ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಜಿ.ಜಗದೀಶ್ ಅವರು ವಾಲಿಬಾಲ್ ಮತ್ತು ಹಗ್ಗ ಜಗ್ಗಾಟಗಳಲ್ಲಿ ಪಾಲ್ಗೊಂಡು ಕ್ರೀಡಾಪಟುಗಳಲ್ಲಿ ಉತ್ಸಾಹ ಮೂಡಿಸಿದ್ದು ವಿಶೇಷವಾಗಿತ್ತು.ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳಾದ ಕಬಡ್ಡಿ, ವಾಲಿಬಾಲ್, ಹಗ್ಗ ಜಗ್ಗಾಟ, ಮ್ಯೂಸಿಕಲ್ ಚೇರ್, ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. 

ಕ್ರೀಡಾಕೂಟದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್.ಗೀತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸೌಮ್ಯ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಎನ್.ಮಂಜುನಾಥ್, ಖಜಾಂಚಿ ಎಸ್.ಚೌಡಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ವೆಂಕಟಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ರತ್ನಯ, ದೈಹಿಕ ಶಿಕ್ಷಕರಾದ ನಾಗರಾಜ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News