ಬಡತನದ ವಿರುದ್ಧ ಕಾಂಗ್ರೆಸ್ ಸರ್ಜಿಕಲ್ ಸ್ಟ್ರೈಕ್: ಪುಷ್ಪಾ ಅಮರನಾಥ್

Update: 2019-04-01 15:58 GMT

ಹುಬ್ಬಳ್ಳಿ, ಎ.1: ಸರ್ಜಿಕಲ್ ಸ್ಟ್ರೈಕ್ ಮಾಡಿರುವುದಾಗಿ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿಯವರು ಹೇಳಿಕೊಂಡು ತಿರುಗುತ್ತಿದ್ದಾರೆ. ಆದರೆ, ನಾವು(ಕಾಂಗ್ರೆಸ್) ಬಡತನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಲು ಹೊರಟಿದ್ದೇವೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಡಾ.ಬಿ.ಪುಷ್ಪಾ ಅಮರನಾಥ್ ಹೇಳಿದರು.

ಸೋಮವಾರ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರಮೋದಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು, ಎಲ್ಲವೂ ನಾನೇ ಮಾಡುತ್ತಿದ್ದೇನೆಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.

ಕಳೆದ ಐದು ವರ್ಷಗಳ ಕಾಲ ದೇಶದ ಜನ ಸುಳ್ಳಿನ ಆಡಳಿತವನ್ನು ನೋಡಿದ್ದಾರೆ. ಈ ಬಾರಿ ಬದಲಾವಣೆಗಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಆಶೀರ್ವದಿಸಲಿದ್ದಾರೆ. ದೇಶದ ಅಭಿವೃದ್ಧಿಯ ವಿಚಾರದಲ್ಲಿ ರಾಹುಲ್ ಗಾಂಧಿ ದೂರ ದೃಷ್ಟಿಯನ್ನು ಹೊಂದಿದ್ದು, ಬಡವರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಎಂದು ಪುಷ್ಪಾ ಅಮರನಾಥ್ ಹೇಳಿದರು.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ರಾಹುಲ್ ಗಾಂಧಿಯನ್ನು ಮುಂದಿನ ಪ್ರಧಾನಿಯನ್ನಾಗಿ ಮಾಡುವುದು ನಮ್ಮ ಗುರಿ. ಕಾಂಗ್ರೆಸ್ ಪಕ್ಷ ಮಹಿಳೆಯರ ಪರವಾಗಿದ್ದು, ಬಾಗಲಕೋಟೆ ಕ್ಷೇತ್ರದಿಂದ ಮಹಿಳಾ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕೆಲಸಗಳನ್ನು ನೋಡಿ, ಜನ ನಮ್ಮನ್ನು ಬೆಂಬಲಿಸುತ್ತಾರೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News