ಕತ್ತಿ ಸಹೋದರರ ಮನವೊಲಿಸುವಲ್ಲಿ ಬಿಎಸ್‌ವೈ ಯಶಸ್ವಿ

Update: 2019-04-01 16:00 GMT

ಬೆಳಗಾವಿ, ಎ.1: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊಂದಿದ್ದ ಮಾಜಿ ಸಚಿವ ಉಮೇಶ್ ಕತ್ತಿ ಹಾಗೂ ಅವರ ಸಹೋದರ ರಮೇಶ್ ಕತ್ತಿಯ ಮನವೊಲಿಸುವಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ರಮೇಶ್ ಕತ್ತಿ ಬಿಜೆಪಿ ತೊರೆದು, ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದನ್ನು, ಗಂಭೀರವಾಗಿ ಪರಿಗಣಿಸಿದ ಯಡಿಯೂರಪ್ಪ ಸೋಮವಾರ ಸ್ವತಃ ಬೆಳಗಾವಿಗೆ ಆಗಮಿಸಿ, ಖಾಸಗಿ ಹೊಟೇಲ್‌ನಲ್ಲಿ ಕತ್ತಿ ಸಹೋದರರ ಜೊತೆ ಚರ್ಚೆ ನಡೆಸಿದರು. ಆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯನ್ನು ಗೆಲ್ಲಿಸಲು ಕತ್ತಿ ಸಹೋದರರು ಸಹಕಾರ ನೀಡಲಿದ್ದಾರೆ. ಅವರ ಸಮ್ಮುಖದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗುವುದು ಎಂದರು.

ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲ ಬದ್ಧವಾಗಿರುತ್ತೇವೆ. ಕತ್ತಿ ಸಹೋದರರು ಯಾವುದೇ ಭಿನ್ನಾಭಿಪ್ರಾಯ ವ್ಯಕ್ತಪಡಿಸಿಲ್ಲ. ಸೂಕ್ತ ಕಾಲದಲ್ಲಿ ರಮೇಶ್ ಕತ್ತಿಗೆ ಸೂಕ್ತ ಸ್ಥಾನಮಾನವನ್ನು ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ಬಿಜೆಪಿ ಮುಖಂಡ ರಮೇಶ್ ಕತ್ತಿ ಮಾತನಾಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದಕ್ಕೆ ನನಗೆ ಯಾವುದೇ ಅಸಮಾಧಾನವಿಲ್ಲ. ಬಿಜೆಪಿ ವಿರುದ್ಧ ಬಂಡಾಯ ಏಳುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಇಲ್ಲಿ ನಮ್ಮನ್ನು ಸಮಾಧಾನ ಮಾಡಲು ಬಂದಿಲ್ಲ. ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಅಗತ್ಯವಿರುವ ಸಿದ್ಧತೆಗಳನ್ನು ಮಾಡಲು ಬಂದಿದ್ದಾರೆ ಎಂದರು.

ನಾಮಪತ್ರ ಸಲ್ಲಿಕೆ

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಬ್ ಜೊಲ್ಲೆ ಎ.3ರಂದು ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿ ಎ.4ರಂದು ನಾಮಪತ್ರ ಸಲ್ಲಿಸಲಿದ್ದಾರೆ.

-ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News