ತೆಂಕನಿಡಿಯೂರು: ಮತದಾರರ ಜಾಗೃತಿ ಅಭಿಯಾನ
ಉಡುಪಿ, ಎ.3: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಉಡುಪಿ ಜಿಲ್ಲೆಯ ಸ್ವೀಪ್ ಸಮಿತಿ ವತಿಯಿಂದ ಲೋಕ ಸಭಾ ಚುನಾವಣೆಗಾಗಿ ಮತದಾರರ ಜಾಗೃತಿ ಅಭಿಯಾನ ಮಂಗಳವಾರ ತೆಂನಿಡಿಯೂರು ಗ್ರಾಮದಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಅಭಿಯಾನಕ್ಕೆ ಚಾಲನೆ ನೀಡಿ, ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸಬೇಕು. ಮತದಾನದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಯುವ ಜನರ ಪಾತ್ರ ಪ್ರಮುಖವಾಗಿದೆ ಎಂದರು.
ಸಮಾಜ ಕಾರ್ಯ ವಿಭಾಗದ ಸಂಯೋಜಕ ಡಾ. ದುಗ್ಗಪ್ಪ ಕಜೆಕಾರ್ ಅಭಿಯಾನದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ನ್ಯಾಯ ಸಮ್ಮತ ಹಾಗೂ ಶಾಂತಿಯುತ ಚುನಾವಣೆಗಳು ದೇಶದ ಘನತೆಯನ್ನು ಎತ್ತಿ ಹಿಡಿಯುತ್ತವೆ. ಯಾವುದೇ ಆಮಿಷಕ್ಕೆ ಒಳಗಾಗದೇ ನಿರ್ಭೀತರಾಗಿ ಮತ ಚಲಾಯಿಸುವಂತೆ ಕರೆ ನೀಡಿದರು.
ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ರಾಘವ ನಾಯ್ಕೊ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಮಂಜುನಾಥ್, ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ರಾಧಾಕೃಷ್ಣ, ಸಮಾಜ ಕಾರ್ಯ ವಿಬಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ತೆಂಕನಿಡಿಯೂರು ಗ್ರಾಮದ ಮನೆ ಮನೆಗೆ ಭೇಟಿ ನೀಡಿ, ಮತದಾರರ ಜಾಗೃತಿಗೆ ಸಂಬಂಧಿಸಿದಂತೆ ವಿವಿಧ ಕರಪತ್ರ, ಸ್ಟಿಕ್ಕರ್‌ಗಳನ್ನು ನೀಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.