ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಯುಗ ಆರಂಭವಾಗಬೇಕು: ಶಾಸಕ ಎಂ.ಕೃಷ್ಣಪ್ಪ

Update: 2019-04-04 16:57 GMT

ಬೆಂಗಳೂರು, ಎ. 4: ದೇಶ ಹಾಗೂ ರಾಜ್ಯದ ಅಭಿವೃದ್ಧಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಪ್ರಗತಿಗೆ ಮೈತ್ರಿಕೂಟದ ಅಭ್ಯರ್ಥಿ ಬಿ.ಕೆ. ಹರಿಪ್ರಸಾದ್ ಗೆಲುವು ಸಾಧಿಸಬೇಕು ಎಂದು ಮಾಜಿ ಸಚಿವ ಹಾಗೂ ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಹೇಳಿದ್ದಾರೆ.

ಗುರುವಾರ ವಿಜಯನಗರ, ಗೋಂವಿದರಾಜ ನಗರದ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹರಿಪ್ರಸಾದ್ ಅವರ ಪರ ಪ್ರಚಾರದ ವೇಳೆ ಮತದಾರರನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಸರಕಾರ ಅಧಿಕಾರದಲ್ಲಿದ್ದು, ಕೇಂದ್ರದಲ್ಲಿ ರಾಹುಲ್ ಗಾಂಧಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬರುವ ಅಗತ್ಯತೆ ಇದೆ. ಹೀಗಾಗಿ ಪ್ರತಿಯೊಂದು ಕ್ಷೇತ್ರವೂ ನಿರ್ಣಾಯಕ. ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರು ಒಗ್ಗೂಡಿ ಪ್ರಚಾರ ನಡೆಸುತ್ತಿದ್ದು, ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಈ ಬಾರಿ ತೆರೆ ಬೀಳಲಿದೆ. ಈ ಕ್ಷೇತ್ರದಲ್ಲಿ ಹೊಸ ಮನ್ವಂತರ ಆರಂಭವಾಗಲಿದ್ದು, ಕಾಂಗ್ರೆಸ್‌ನ ಹೊಸ ಅಧ್ಯಾಯದ ಪುಟ ತೆರೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮೈತ್ರಿ ಸರಕಾರ ಬೆಂಗಳೂರು ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುತ್ತಿದ್ದು, ಇದಕ್ಕೆ ಸಮಾನಾಂತರವಾಗಿ ಕೇಂದ್ರದ ನೆರವು ಅಗತ್ಯ. ಈ ವರೆಗೆ ಕೇಂದ್ರದ ಅನುದಾನ ಈ ಭಾಗಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತಿರಲಿಲ್ಲ. ಹೀಗಾಗಿ ಕೇಂದ್ರದಿಂದ ಹೆಚ್ಚಿನ ಸಂಪನ್ಮೂಲ ತಂದು ಕ್ಷೇತ್ರದ ಅಭಿವೃದ್ದಿ ಮಾಡಬೇಕಾಗಿದೆ ಎಂದರು.

ಬೆಂಗಳೂರು ದಕ್ಷಿಣ ಭಾಗಕ್ಕೆ ಬಿಜೆಪಿ ಯಾವುದೇ ಕೊಡುಗೆ ನೀಡಿಲ್ಲ. ಹೀಗಾಗಿ ನಮ್ಮ ಜತೆ ಜೆಡಿಎಸ್ ನಾಯಕರು ಕೈಜೋಡಿಸಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರು ಮತದಾರರ ಮನೆ ಬಾಗಿಲಿಗೆ ತೆರಳಿ ಬಿಜೆಪಿಯ ಪೊಳ್ಳು ಭರವಸೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದರು.
ಮೈತ್ರಿಕೂಟದ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಕಾಂಗ್ರೆಸ್-ಜೆಡಿಎಸ್ ನಾಯಕರು ಒಗ್ಗೂಡಿ ಕೆಲಸ ಮಾಡುತ್ತಿದ್ದು, ಇದರಿಂದ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗಿದೆ. ಉತ್ಸಾಹ ಮತ್ತು ಹುರುಪಿನಿಂದ ಕೆಲಸ ಮಾಡುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಗೆಲುವು ನಿಶ್ಚಿತ ಎಂದು ಭರವಸೆ ವ್ಯಕ್ತಪಡಿಸಿದರು.

ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್. ಸುದರ್ಶನ್, ಮಾಜಿ ಶಾಸಕ ಪ್ರಿಯಕೃಷ್ಣ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಮಾಜಿ ಮೇಯರ್ ರಾಮಚಂದ್ರಪ್ಪ, ಮಾಜಿ ಉಪಮೇಯರ್ ಪುಟ್ಟರಾಜು ಸೇರಿದಂತೆ ಮತ್ತಿತರ ಮುಖಂಡರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News