ರಾಜ್ಯದಲ್ಲಿ ಬಿಜೆಪಿ ಎರಡು ಸೀಟು ಕೂಡ ಗೆಲ್ಲಲ್ಲ: ಸಚಿವ ಡಿಕೆಶಿ

Update: 2019-04-05 13:24 GMT

ಬೆಂಗಳೂರು, ಎ.5: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಶುಕ್ರವಾರ ನಗರದ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ನಗರದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಭೈರೇಗೌಡ ಪರವಾಗಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಈ ಕ್ಷೇತ್ರದ ಬಿಜೆಪಿ ಶಾಸಕ, ಸಮ್ಮಿಶ್ರ ಸರಕಾರವನ್ನೇ ಮುಗಿಸಲು ಮುಂದಾಗಿದ್ದಾರೆ. ಅವರ ಬಗ್ಗೆ ಈಗ ಏನು ಹೇಳುವುದಿಲ್ಲ, ಮುಂದಿನ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಂದು ಅವರಿಗೆ ಉತ್ತರ ಕೊಡುತ್ತೇನೆ. ಇಲ್ಲಿನ ಶಾಸಕರ ಬದಲಾವಣೆ ಮಾಡಬೇಕಿದೆ ಎಂದು ಮಲ್ಲೇಶ್ವರಂ ಶಾಸಕ ಡಾ.ಅಶ್ವಥ್ ನಾರಾಯಣ್ ವಿರುದ್ಧ ಶಿವಕುಮಾರ್ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಬೆಂಗಳೂರಿನ ಅಭಿವೃದ್ಧಿಗೆ 13 ಸಾವಿರ ಕೋಟಿ ರೂ.ಗಳನ್ನು ಕೊಟ್ಟಿದ್ದೇವೆ. ಈಗ ಮೈತ್ರಿ ಸರಕಾರದಲ್ಲಿ 25 ಸಾವಿರ ಕೋಟಿ ರೂ.ಗಳ ಯೋಜನೆ ಸಿದ್ಧವಾಗಿದೆ. ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಹಾಲಿ ಸಂಸದ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಕೊಡುಗೆ ಏನು ಎಂದು ಅವರು ಪ್ರಶ್ನಿಸಿದರು.

ದೇಶದಲ್ಲಿ ಬದಲಾವಣೆ ಅವಶ್ಯಕತೆ ಇದೆ. ಸರ್ಜಿಕಲ್ ಸ್ಟ್ರೈಕ್‌ನಿಂದ ನಮಗೆ ಲೋಕಸಭಾ ಚುನಾವಣೆಯಲ್ಲಿ 22 ಸೀಟ್ ಸಿಗುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳುತ್ತಾರೆ. ನಮ್ಮ ಸೈನಿಕರು ಅಲ್ಲಿ ಹೋರಾಟ ಮಾಡಿದರೆ, ಬಿಜೆಪಿಯವರು ಇಲ್ಲಿ ಚುನಾವಣೆ ಗೆಲ್ಲುತ್ತೇವೆ ಎನ್ನುತ್ತಾರೆ. ರಾಜ್ಯದಲ್ಲಿ ಬಿಜೆಪಿ ಎರಡು ಸೀಟು ಕೂಡ ಗೆಲ್ಲಲ್ಲ ಎಂದು ಶಿವಕುಮಾರ್ ಭವಿಷ್ಯ ನುಡಿದರು.

ಶಿವಮೊಗ್ಗದಲ್ಲಿ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಈ ಬಾರಿ ಚುನಾವಣೆಯಲ್ಲಿ ಗೆಲ್ಲುವುದಿಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಗೆಲುವು ನಿಶ್ಚಿತ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯವರು ತೇಜಸ್ವಿನಿ ಅನಂತ್‌ಕುಮಾರ್‌ಗೆ ಟಿಕೆಟ್ ನೀಡಿಲ್ಲ. ಆರೆಸೆಸ್ಸ್ ನಿಂದ ಬಂದ ವ್ಯಕ್ತಿಗೆ ಟಿಕೆಟ್ ಕೊಟ್ಟಿದ್ದಾರೆ ಎಂದು ಅವರು ಟೀಕಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News