×
Ad

ಮೈಸೂರು: ಕಾಂಗ್ರೆಸ್-ಜೆಡಿಎಸ್ ನಾಯಕರಿಂದ ಒಗ್ಗಟ್ಟಿನ ಮಂತ್ರ!

Update: 2019-04-07 13:10 IST

ಮೈಸೂರು,ಎ.7: ಕೋಮುವಾದ ಮೂಲಭೂತವಾದವನ್ನು ಹಿಮ್ಮಟ್ಟಿಸಲು ಹೋರಾಟ ಮಾಡುವುದಾಗಿ ಕಾಂಗ್ರೆಸ್-ಜೆಡಿಎಸ್ ನಾಯಕರು ಒಗ್ಗಟ್ಟಿನ ಮಂತ್ರವನ್ನು ಪಠಿಸಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ರವಿವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಂಗ್ರೆಸ್-ಜೆಡಿಎಸ್ ನಾಯಕರುಗಳು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಒಕ್ಕೊರಲಿನ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ನಮ್ಮ ಗುರಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದು ಮತ್ತು ಜಾತ್ಯಾತೀತ ಮನೋಭಾವ ಹೊಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದಾಗುವ ಮೂಲಕ ರಾಜ್ಯ ಮತ್ತು ರಾಷ್ಟ್ರಕ್ಕೆ ಸ್ಪಷ್ಟ ಸಂದೇಶ ನೀಡುವುದಾಗಿ ಹೇಳಿದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಉಸ್ತುವಾರಿ ಡಾ.ಎಚ್.ಸಿ.ಮಹದೇವಪ್ಪ, ಸಂವಿಧಾನಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯ ಎದುರಾಗಿದ್ದು ಅದನ್ನು ಉಳಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ನಮ್ಮ ಹಿಂದಿನ ಎಲ್ಲಾ ಹಳೆಯ ಘಟನೆಗಳನ್ನು  ಮರೆತು ವೈಯಕ್ತಿಕ ಹಿತಾಸಕ್ತಿಯನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಹೋರಾಟ ಮಾಡಿ ಕೋಮುವಾದಿ ಶಕ್ತಿಗಳನ್ನು ದಮನಮಾಡುವುದಾಗಿ ಹೇಳಿದರು.

ಸಂವಿಧಾನ ಉಳಿಸಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ ಎಂದು ನಾವು ಪ್ರಚಾರ ಸಮಯದಲ್ಲಿ ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ. ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರೇ ಇಂದು ಸಂವಿಧಾನ ಬದಲಾಯಿಸಿ ಎಂದು ಹೇಳುತ್ತಾರೆ. ಇನ್ನೂ ದಲಿತ ದೌರ್ಜನ್ಯ ಕಾಯ್ದೆಯನ್ನು ಸಡಿಲಗೊಳಿಸುವ ಹುನ್ನಾರ ಮೋದಿ ಸರ್ಕಾರದಲ್ಲಿ ನಡೆಯಿತು, ಹಾಗೇ ವಾಜಪೇಯಿ ಆಡಳಿತದಲ್ಲಿ ಸಂವಿಧಾನ ಪರಾಮರ್ಶೆ ಎಂಬ ವಾತಾವರಣ ನಿರ್ಮಾಣವಾಗಿತ್ತು, ಆದ್ದರಿಂದ ಸಂವಿಧಾನಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯ ಎದುರಾಗಿದೆ. ಹಾಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಕೋಮುವಾಧಿ ಶಕ್ತಿಗಳ ಕೈಗೆ ಅಧಿಕಾರ ಸಿಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಮಗಳೂರು, ತುಮಕೂರು ಸೇರಿದಂತೆ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜೆಡಿಎಸ್ ನಾಯಕರು ಒಟ್ಟಿಗೆ ಪ್ರಚಾರ ಮಾಡುವುದಾಗಿ ಹೇಳಿದ ಅವರು, ಮೈಸೂರಿನಲ್ಲಿ ಸಿ.ಎಚ್.ವಿಜಯಶಂಕರ್, ಚಾಮರಾಜನಗರದಲ್ಲಿ ಆರ್.ಧ್ರುವನಾರಾಯಣ್ ಗೆಲುವಿಗೆ ನಾವೆಲ್ಲರೂ ಒಟ್ಟಿಗೆ ಸೋಮವಾರದಿಂದ ಪ್ರಚಾರ ಕೈಗೊಳ್ಳುವುದಾಗಿ ಹೇಳಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಮಾತನಾಡಿ, ರಾಜ್ಯದಲ್ಲಿ 7 ಕಡೆ ಜೆಡಿಎಸ್ 21 ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಆದರೆ ಎಲ್ಲರೂ ನಮ್ಮವರೇ ಎಂಬ ಭಾವನೆಯಿಂದ ಎರಡೂ ಪಕ್ಷದವರು ಪ್ರಮಾಣಿಕವಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳಾದ ಸಿ.ಎಚ್.ವಿಜಯಶಂಕರ್, ಆರ್.ಧ್ರುವನಾರಾಯಣ್, ಸಚಿವರುಗಳಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಶಾಸಕರಾದ ತನ್ವೀರ್ ಸೇಠ್, ಡಾ.ಯತೀಂದ್ರ ಸಿದ್ದರಾಮಯ್ಯ, ಅಶ್ವಿನ್‍ ಕುಮಾರ್, ಅನಿಲ್ ಚಿಕ್ಕಮಾದು, ಕೆ.ಮಹದೇವ್, ವಿಧಾನಪರಿಷತ್ ಸದಸ್ಯ ಆರ್.ಧವರ್ಸೇನಾ, ಜೆಡಿಎಸ್ ಜಿಲ್ಲಾಧ್ಯಕ್ಷ ಎನ್.ನರಸಿಂಹಸ್ವಾಮಿ, ನಗರಾಧ್ಯಕ್ಷ ಕೆ.ಟಿ.ಚಲುವೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಧ್ಯಕ್ಷೆ ಪುಷ್ಪಾ ಅಮರ್‍ನಾಥ್, ಮಾಜಿ ಶಾಸಕರುಗಳಾದ ಎಚ್.ಪಿ.ಮಂಜುನಾಥ್, ಎಂ.ಕೆ.ಸೋಮಶೇಖರ್ ಸೇರಿದಂತೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಪ್ರಮುಖ ನಾಯಕರು ಹಾಜರಿದ್ದರು.

ರಾಜ್ಯದ  ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ. ಒಂದು ವೇಳೆ ನಮ್ಮ ಪಕ್ಷದ ನಿಲುವಿಗೆ ವಿರುದ್ಧವಾಗಿ ನಡೆದುಕೊಂಡರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದೇವೆ. ಆ ಕೆಲಸವನ್ನು ಕಾಂಗ್ರೆಸ್‍ನವರು ಕಟ್ಟುನಿಟ್ಟಾಗಿ ಪಾಲಿಸಿದರೆ ಮೈತ್ರಿಯಲ್ಲಿ ಯಾವ ಗೊಂದಲವೂ ಉಂಟಾಗುವುದಿಲ್ಲ. ಆ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡರು ಕ್ರಮ ಕೈಗೊಳ್ಳಬೇಕು.
-ಸಾ.ರಾ.ಮಹೇಶ್, ಪ್ರವಾಸೋದ್ಯಮ ಹಾಗೂ ಕೊಡಗು ಉಸ್ತುವಾರಿ ಸಚಿವ

ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರಲ್ಲಿ  ಅಸಮಧಾನವಿರುವುದು ನಿಜ. ಅದನ್ನು ತಿಳಿಗೊಳಿಸುವ ಯತ್ನವನ್ನು ಈಗಾಗಲೇ ಮಾಡುತ್ತಿದ್ದೇವೆ. ಇನ್ನು 10  ದಿನಗಳಲ್ಲಿ ಎಲ್ಲವೂ ಸರಿಯಾಗಿ ಮೈತ್ರಿ ಅಭ್ಯರ್ಥಿಳು ಭರ್ಜರಿ ಗೆಲುವನ್ನು ಕಾಣಲಿದ್ದಾರೆ.
-ಜಿ.ಟಿ.ದೇವೇಗೌಡ, ಉನ್ನತ ಶಿಕ್ಷಣ ಹಾಗೂ ಮೈಸೂರು ಉಸ್ತುವಾರಿ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News