ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ ತಡೆಯಲು ಕೋರಿ ಪತ್ರ

Update: 2019-04-07 18:02 GMT

ಬೆಂಗಳೂರು, ಎ.7: ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಿರುವುದರಿಂದ ಯಾವುದೇ ಕಾರಣಕ್ಕೂ ಚುನಾವಣಾ ಸ್ಪರ್ಧಾರ್ಥಿಗಳು ಪ್ರಚಾರಕ್ಕೆ ಮಕ್ಕಳನ್ನು ಬಳಕೆ ಮಾಡಿಕೊಳ್ಳದಂತೆ ತಡೆಯಬೇಕು ಎಂದು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮಕ್ಕಳ ಆಯೋಗ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

ಮಕ್ಕಳಿಗೆ ಬೇಸಿಗೆ ರಜೆ ಇರುವುದರಿಂದ ಚುನಾವಣಾ ಸಂದರ್ಭದಲ್ಲಿ ಮಕ್ಕಳನ್ನು ಪ್ರಚಾರಕ್ಕೆ ಬಳಸಿಕೊಳ್ಳುವ ಸಾಧ್ಯತೆ ಇದೆ. ಆದುದರಿಂದಾಗಿ ಮಕ್ಕಳನ್ನು ಪ್ರಚಾರಕ್ಕೆ ಬಳಸುತ್ತಿರುವುದು ಕಂಡುಬಂದರೆ ದೂರು ದಾಖಲಿಸಿಕೊಳ್ಳಲಾಗುತ್ತದೆ. ಈ ರೀತಿ ಮಕ್ಕಳ ಬಳಕೆ ಕಂಡು ಬಂದರೆ ಮಕ್ಕಳ ಆಯೋಗದ ಗಮನಕ್ಕೆ ತಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಎಲ್ಲ ಪಕ್ಷದವರು ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ ಮಾಡುತ್ತಿರುವ ಹಿನ್ನಲೆ ಆಯೋಗಕ್ಕೆ ಪತ್ರ ಬರೆಯಲಾಗಿದೆ.

ಪತ್ರದಲ್ಲಿ ಏನಿದೆ...?: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಗಳ ಕಾಯ್ದೆ 2005ರ ಸೆಕ್ಷನ್ 13ರ ಅನ್ವಯ ದೂರುಗಳನ್ನು ವಿಚಾರಣೆಗೊಳಪಡಿಸುವ ಮತ್ತು ಸೆಕ್ಷನ್ 14ರ ಅಡಿಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಲ್ ನ್ಯಾಯಾಲಯದಂತೆ ಕಾರ್ಯನಿರ್ವಸುವ ಅಧಿಕಾರವನ್ನು ಹೊಂದಿರುತ್ತದೆ. ಮಕ್ಕಳ ಹಕ್ಕುಗಳ ಉಲ್ಲಂಘನೆಯಾದ ಪ್ರಕರಣಗಳನ್ನು ಆಯೋಗವು ಸ್ವ-ಪ್ರೇರಣಯಿಂದ (ಸುಮೊಟೋ) ದೂರು ದಾಖಲಿಸಿ ಕ್ರಮಗಳನ್ನು ಕೈಗೊಳ್ಳುವ ಅಧಿಕಾರವನ್ನು ಹೊಂದಿರುತ್ತದೆ.

ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳಿಗೆ ಬೇಸಿಗೆಯ ನಿಮಿತ್ತ ಶಾಲೆಗಳಿಗೆ ರಜೆ ಘೋಸಿರುವುದರಿಂದ ಈ ಮಕ್ಕಳನ್ನು ವಿವಿಧ ಪಕ್ಷಗಳು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಳ್ಳುವ ಸಾಧ್ಯತೆ ಇರುತ್ತದೆ. ಮಕ್ಕಳನ್ನು ಈ ರೀತಿಯ ಚುನಾವಣಾ ಪ್ರಚಾರದಲ್ಲಿ ದುಡಿಸಿಕೊಳ್ಳುವುದು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದಂತಾಗುತ್ತದೆ.

ಈ ಬಗ್ಗೆ ತಾವು ವೈಯಕ್ತಿಕ ಗಮನ ಹರಿಸಿ, ಎಲ್ಲಾ ಜಿಲ್ಲೆಗಳ ಚುನಾವಣಾ ಅಧಿಕಾರಿಗಳಿಗೆ ಯಾವುದೇ ರೀತಿಯಲ್ಲಿ ಮಕ್ಕಳಿಂದ ದುಡಿಮೆಯನ್ನು ಮಾಡಿಸುವಂತಿಲ್ಲ ಹಾಗೂ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಮಕ್ಕಳ ತಡೆಯುವ ದೃಷ್ಟಿಯಿಂದ ಸೂಕ್ತ ನಿರ್ದೇಶನ ನೀಡುವಂತೆ ಈ ಮೂಲಕ ತಮ್ಮನ್ನು ಕೋರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News