ಮೇ19 ರಂದು ಕುಂದಗೋಳ ಕ್ಷೇತ್ರಕ್ಕೆ ಉಪಚುನಾವಣೆ

Update: 2019-04-09 13:49 GMT

ಬೆಂಗಳೂರು, ಎ. 9: ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ತೆರವಾಗಿರುವ ಗದಗ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 19ರಂದು ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.

ಎ.22ರಂದು ಅಧಿಸೂಚನೆ ಹೊರಬೀಳಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು ಎ.29 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಎ.30ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 2ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ.

ಮೇ 19ರಂದು ಮತದಾನ ನಡೆಯಲಿದ್ದು, ಮೇ 23ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

ಮಾರ್ಚ್ 22ರಂದು ಹೃದಯಾಘಾತದಿಂದ ಸಚಿವ ಸಿ.ಎಸ್.ಶಿವಳ್ಳಿಯವರು ಮೃತಪಟ್ಟಿದ್ದರು. 1994ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕುಂದಗೋಳ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಶಿವಳ್ಳಿ 2004, 2013 ಹಾಗೂ 2018ರಲ್ಲಿ ಒಟ್ಟು ನಾಲ್ಕು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2018ರ ಚುನಾವಣೆಯಲ್ಲಿ 64,871 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ವಿರುದ್ಧ ಜಯಗಳಿಸಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News