ಸಂವಿಧಾನ ವಿರೋಧಿಸುವರು ಪಾಪಿಗಳು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

Update: 2019-04-14 15:49 GMT

ಬೆಂಗಳೂರು, ಎ.14: ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ದೇಶಕ್ಕೆ ರಕ್ಷಣೆ ದಕ್ಕಿದೆ. ಆದರೆ, ಇದನ್ನು ವಿರೋಧಿಸುವುದು ಪಾಪಿಗಳು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ರವಿವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ದೇಶದ ಪವಿತ್ರ ಗ್ರಂಥ ಸಂವಿಧಾನ. ಆದರೆ, ಬಿಜೆಪಿ ಮತ್ತು ಸಂಘ ಪರಿವಾರ ದವರು ಸಂವಿಧಾನವನ್ನು ಒಪ್ಪಲ್ಲ. ಬದಲಾಗಿ, ಸಂವಿಧಾನವನ್ನು ನಾಶ ಮಾಡುತ್ತೇವೆ ಎನ್ನುತ್ತಾರೆ ಎಂದು ದೂರಿದರು.

ಇತ್ತೀಚಿಗೆ ಮಂಡ್ಯದಲ್ಲಿ ನಡೆದಿ ಮೈತ್ರಿ ಸಮಾವೇಶದಲ್ಲಿ ಮಾಜಿ ಶಾಸಕ ಚೆಲುವರಾಯಸ್ವಾಮಿ ಗೈರು ಹಾಜರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ದಿನೇಶ್, ಈಗಾಗಲೇ ಮಂಡ್ಯ ವಿಚಾರದಲ್ಲಿ ಚರ್ಚೆ ನಡೆಸಿದ್ದೇವೆ. ರಾಹುಲ್ ಕಾರ್ಯಕ್ರಮಕ್ಕೂ ಅವರು ಗೈರು ಹಾಜರಾಗಿದ್ದರು. ಈ ವಿಚಾರವನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು.

ಸಚಿವರಾದ ಡಿ.ಕೆ.ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲ್ ಹೇಳಿಕೆ ವಿಚಾರ ಪಕ್ಷಕ್ಕೆ ಸೇರಿದ್ದಲ್ಲ. ಅದು ಒಂದು ಸಮುದಾಯಕ್ಕೆ ಸಂಬಂಧಪಟ್ಟ ವಿಚಾರ. ಆ ಸಮುದಾಯದವರು ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ. ಚುನಾವಣಾ ಸಂದರ್ಭದಲ್ಲಿ ಇಂತಹ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುವುದು ಬೇಡ ಎಂದು ಉಭಯ ನಾಯಕರಿಗೆ ಹೇಳಿರುವುದಾಗಿ ನುಡಿದರು. ಈ ಸಂದರ್ಭ ಕೆಪಿಸಿಸಿ ಉಪಾಧ್ಯಕ್ಷ ಡಾ.ಬಿ.ಎಲ್.ಶಂಕರ್, ಮಾಜಿ ಸಚಿವೆ ರಾಣಿ ಸತೀಶ್ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News