ಇವಿಎಂ ಸೇರಿದ ಅಭ್ಯರ್ಥಿಗಳ ಭವಿಷ್ಯ: ಮೇ 23ರ ಫಲಿತಾಂಶದತ್ತ ಎಲ್ಲರ ಚಿತ್ತ

Update: 2019-04-18 14:49 GMT

ಬೆಂಗಳೂರು, ಎ.18: ದೇಶದ ಗಮನ ಸೆಳೆದಿರುವ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಮತ್ತು ಮೈತ್ರಿ ಅಭ್ಯರ್ಥಿಗಳ ಬೆಂಬಲಿಗರ ನಡುವಿನ ಘರ್ಷಣೆ, ಇವಿಎಂ, ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆ ಗೊಂದಲಗಳನ್ನು ಹೊರತುಪಡಿಸಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ನಡೆದ ಮೊದಲ ಹಂತದ ಮತದಾನ ಶಾಂತಿಯುತ ಅಂತ್ಯಕಂಡಿದೆ. ಮೇ 23ರ ಚುನಾವಣಾ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಸವನಪುರ ಗ್ರಾಮದಲ್ಲಿ ಪಕ್ಷೇತರ ಮತ್ತು ಮೈತ್ರಿ ಅಭ್ಯರ್ಥಿಗಳ ಬೆಂಬಲಿಗರ ಮಧ್ಯೆ ಘರ್ಷಣೆ ನಡೆದಿದ್ದು, ಮಾತಿನ ಚಕಮಕಿ ನಡೆದಿದೆ. ಈ ಮಧ್ಯೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊನ್ನೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆಯಾಗಿ ಓರ್ವನ ತಲೆಗೆ ಪೆಟ್ಟು ತಗುಲಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ಬೆಳಗ್ಗೆ 7 ಗಂಟೆಯಿಂದ ಬಿರುಸಿನಿಂದಲೇ ಆರಂಭವಾದ ಮತದಾನ ಮಧ್ಯಾಹ್ನದ ಬೇಸಿಗೆ ಬಿಸಿಲಿನ ಹಿನ್ನೆಲೆಯಲ್ಲಿ ಕೊಂಚ ಮಂಕಾಗಿತ್ತು. 3 ಗಂಟೆಯ ಬಳಿಕ ಕೊಂಚ ಚೇತರಿಸಿಕೊಂಡ ಮತದಾನ ಸಂಜೆ 6ಗಂಟೆಯ ವರೆಗೂ ಗಣ್ಯರು ಸೇರಿದಂತೆ ಮತದಾರರು ಅತ್ಯುತ್ಸಾಹದಿಂದಲೇ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸಿದರು.

100ಕ್ಕೆ ನೂರರಷ್ಟು ಮತದಾನ ಮಾಡಿಸಬೇಕೆಂದು ರಾಜ್ಯ ಚುನಾವಣಾ ಆಯೋಗ ಜಾಗೃತಿ ಮೂಡಿಸಿದ್ದು ಯಶಸ್ವಿಯಾಗಿಲ್ಲ. ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಕಡಿಮೆ ಮತದಾನವಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಮತದಾನವಾಗಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇ.70ರಷ್ಟು ಮತದಾನವಾಗಿದೆ.

ಇವಿಎಂನಲ್ಲಿ ಭವಿಷ್ಯ ಭದ್ರ: ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿರುವ ಮಂಡ್ಯ, ತುಮಕೂರು, ಬೆಂಗಳೂರು ದಕ್ಷಿಣ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳ 241 ಅಭ್ಯರ್ಥಿಗಳ ಹಣೆಬರಹವನ್ನು ಮತದಾರರು ಬರೆದಿದ್ದು, ಅಭ್ಯರ್ಥಿಗಳ ಭವಿಷ್ಯ ಇವಿಎಂ ಸೇರಿದೆ.

ಬೆಂಗಳೂರು ನಗರ ಸೇರಿದಂತೆ ವಿವಿಧೆಡೆ ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರು ಹಾಗೂ ಪೊಲೀಸರೊಂದಿಗೆ ಸಾರ್ವಜನಿಕರು ಮಾತಿನ ಚಕಮಕಿ ನಡೆಸಿದ್ದು ಹಕ್ಕು ಚಲಾಯಿಸಲು ಅವಕಾಶವಾಗದೆ ಚುನಾವಣಾ ಆಯೋಗಕ್ಕೆ ಹಿಡಿ ಶಾಪಹಾಕಿದ್ದಾರೆ.

ಮೊದಲ ಬಾರಿಗೆ ಹಕ್ಕು ಚಲಾವಣೆಗೆ ಅವಕಾಶ ಸಿಕ್ಕ ಯುವಕ-ಯುವತಿಯರು, ವಿಕಲಚೇತನರು, ಮಹಿಳೆಯರು, ವೃದ್ಧರು ಸೇರಿದಂತೆ ಜನ ಸಾಮಾನ್ಯರು ಅತ್ಯಂತ ಉತ್ಸಾಹದಿಂದಲೇ ಕುಟುಂಬದ ಸದಸ್ಯರೊಂದಿಗೆ ಆಗಮಿಸಿ ಸುಡು ಬಿಸಿಲಿನಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

ಅಧಿಕಾರಿ ನಿಧನ: ಚಾಮರಾಜನಗರ ಜಿಲ್ಲೆ ಸುಲ್ತಾನ್ ಶರೀಫ್ ವೃತ್ತದ ಬಳಿಯ ಮತಗಟ್ಟೆಯಲ್ಲಿ ಹೆಚ್ಚುವರಿ ಮತಗಟ್ಟೆ ಅಧಿಕಾರಿ ಶಾಂತಮೂರ್ತಿ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ. ಶಾಂತಮೂರ್ತಿ ಹನೂರು ಸರಕಾರಿ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಗೊತ್ತಾಗಿದೆ.

ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ(ಮೀಸಲು), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ(ಮೀಸಲು), ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ(ಮೀಸಲು) ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ.

ಮುನ್ನಚ್ಚರಿಕೆ ಕ್ರಮವಾಗಿ ಮತದಾನ ನಡೆಯಲಿರುವ 14 ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಮತಗಟ್ಟೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಕೆಲ ಸಣ್ಣಪುಟ್ಟ ಗೊಂದಲಗಳನ್ನು ಹೊರತುಪಡಿಸಿದರೆ ಮತದಾನ ಶಾಂತಿಯುತ ಅಂತ್ಯವಾಗಿದೆ.

ಮಂಡ್ಯ ಹೊರತುಪಡಿಸಿದರೆ ಬಹುತೇಕ ಕ್ಷೇತ್ರಗಳಲ್ಲಿ ಮೈತ್ರಿ ಹಾಗೂ ಬಿಜೆಪಿ ಅಭ್ಯರ್ಥಿಗಳ ನಡುವೆ ಹಣಾಹಣಿ ಇದೆ. ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮೈತ್ರಿ ಅಭ್ಯರ್ಥಿ ನಿಖಿಲ್ ಮಧ್ಯೆ ಪೈಪೋಟಿ ಇದ್ದು, ವಿಜಯಮಾಲೆ ಯಾರಿಗೆ ಎಂಬ ನಿರೀಕ್ಷೆ ಸೃಷ್ಟಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News