ವಿದ್ಯಾರ್ಥಿನಿ ಮಧು ನಿಗೂಢ ಸಾವು ಪ್ರಕರಣದ ಉನ್ನತ ತನಿಖೆಯಾಗಲಿ: ಸಿದ್ದರಾಮಯ್ಯ
ರಾಯಚೂರು, ಎ.20: ನಗರದ ನವೋದಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮಧು ಪತ್ತಾರ್(23) ನಿಗೂಢ ಸಾವು ಪ್ರಕರಣ ಸಂಬಂಧ ಉನ್ನತ ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಶನಿವಾರ ಚುನಾವಣಾ ಪ್ರಚಾರ ನಿಮಿತ್ತ ರಾಯಚೂರಿಗೆ ತೆರಳಿದ್ದ ಸಿದ್ದರಾಮಯ್ಯ ಇತ್ತೀಚೆಗೆ ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿನಿ ಮಧು ಪತ್ತಾರ್ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಮೊಬೈಲ್ ಮೂಲಕ ಕರೆ ಮಾಡಿದ ಸಿದ್ದರಾಮಯ್ಯ ಪ್ರಕರಣದ ಕುರಿತು ಶೀಘ್ರದಲ್ಲಿ ಉನ್ನತ ತನಿಖೆಯಾಗಬೇಕು.ಅಗತ್ಯವಿದ್ದರೆ ಸಿಐಡಿ ತನಿಖೆಯನ್ನು ನಡೆಸುವಂತೆ ತಿಳಿಸಿದರು.
ಸುಮೋಟೋ ಕೇಸ್ ದಾಖಲಿಸಲು ತಯಾರಿ?
ರಾಯಚೂರು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮಧು ಪತ್ತಾರ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗ ಸುಮೋಟೊ ಕೇಸ್ ದಾಖಲಿಸಿಕೊಂಡು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದೆ ಎಂದು ತಿಳಿದುಬಂದಿದೆ.
ಸಿಐಡಿ ತನಿಖೆಗೆ ಗೃಹ ಸಚಿವರಿಗೆ ಸಿದ್ದರಾಮಯ್ಯ ಸಲಹೆ
ರಾಯಚೂರಿನ ಬಾಲಕಿಯ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕು. ಅಗತ್ಯವಿದ್ದರೆ ಸಿಐಡಿ ತನಿಖೆಯನ್ನು ನಡೆಸುವಂತೆ ಸ್ಥಳದಲ್ಲೇ ದೂರವಾಣಿ ಕರೆಮಾಡಿ ಗೃಹ ಸಚಿವ ಎಂ.ಬಿ.ಪಾಟೀಲ್‌ರಿಗೆ ತಿಳಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶನಿವಾರ ಈ ಸಂಬಂಧ ಟ್ವಿಟ್ ಮಾಡಿರುವ ಸಿದ್ದರಾಮಯ್ಯ, ರಾಯಚೂರಿನಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ವಿದ್ಯಾರ್ಥಿನಿ ಮಧು ಪತ್ತಾರ್ ಅವರ ಪೋಷಕರು ನನ್ನನ್ನು ಭೇಟಿ ಮಾಡಿ, ತಮ್ಮ ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದರು. ಆ ಹಿನ್ನೆಲೆಯಲ್ಲಿ ಗೃಹ ಸಚಿವರಿಗೆ ಸ್ಥಳಕ್ಕೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.