ದೇಶದ ಅಭಿವೃದ್ಧಿಗೆ ಬಿಜೆಪಿಗೆ ಬಳಿ ಅಜೆಂಡಾ ಇಲ್ಲ: ದಿನೇಶ್ ಗುಂಡೂರಾವ್

Update: 2019-04-20 14:34 GMT

ಹುಬ್ಬಳ್ಳಿ, ಎ. 20: ದೇಶದ ಅಭಿವೃದ್ಧಿಗೆ ಬಿಜೆಪಿಗೆ ಯಾವುದೇ ಅಜೆಂಡಾ ಇಲ್ಲ. ಹೀಗಾಗಿ ರಾಮಮಂದಿರ, ಸಂವಿಧಾನದ 370ನೆ ವಿಧಿ, ಭಯೋತ್ಪಾದನೆ, ಭದ್ರತೆ ವಿಷಯಗಳ ಜತೆಗೆ ದೇಶ ಒಡೆಯುವ ಹೇಳಿಕೆಗಳ ಮೂಲಕ ಓಟು ಕೇಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ಶನಿವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ರಾಮಮಂದಿರ ವಿವಾದ ಇತ್ಯರ್ಥಕ್ಕೆ ಮುಂದಾಗಲಿಲ್ಲ. ಇದೀಗ ಮತ್ತೆ ಅದೇ ವಿಚಾರಗಳನ್ನು ಪ್ರಣಾಳಿಕೆಯಲ್ಲಿ ಉಲ್ಲೇಖಿಸುವ ಮೂಲಕ ಜನರನ್ನು ಮರಳು ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮೋದಿ ಬೆಂಬಲಿಸದವರು ದೇಶದ್ರೋಹಿಗಳು ಎನ್ನುವ ಬಿಜೆಪಿ ಮುಖಂಡರು, ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಗೆ ಮತ ಹಾಕದವರು ಪಾಕಿಸ್ತಾನದ ಬೆಂಬಲಿಗರು ಎನ್ನುವ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಹೇಳಿಕೆ, ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ ಎಂದು ಟೀಕಿಸಿದರು.

ದೇಶದ ಅಭಿವೃದ್ಧಿಯ ಬಗ್ಗೆ ಬಿಜೆಪಿಗೆ ದೂರದೃಷ್ಟಿ ಇಲ್ಲ. ಬದಲಿಗೆ ಚುನಾವಣೆಗೆ ಸಾಮಾಜಿಕ ಜಾಲತಾಣ, ಮಾಧ್ಯಮ ನಿರ್ವಹಣೆ ಮಾತ್ರ ಗೊತ್ತಿದೆ. ಧರ್ಮದ ಹೆಸರಿನಲ್ಲಿ ಜನರನ್ನು ಪ್ರಚೋದಿಸುವ ಮೂಲಕ, ಚುನಾವಣೆಯಲ್ಲಿ ಲಾಭ ಪಡೆಯಲು ಬಿಜೆಪಿ ಮುಂದಾಗಿದೆ ಎಂದು ಲೇವಡಿ ಮಾಡಿದರು.

ಕಡೆಗಣನೆ: ಹಿಂದುಳಿದ ಹಾಗೂ ಅಲ್ಪಸಂಖ್ಯಾತರಿಗೆ ಬಿಜೆಪಿ ಯಾವ ಕ್ಷೇತ್ರದಲ್ಲೂ ಟಿಕೆಟ್ ಕೊಟ್ಟಿಲ್ಲ. ಸಾಮಾಜಿಕ ನ್ಯಾಯ ತತ್ವದ ಪ್ರಕಾರ ನಾವು ದೇವಾಂಗ, ಬೆಸ್ತ, ಬಿಲ್ಲವ, ಈಡಿಗ, ಕುರುಬರಿಗೆ ಟಿಕೆಟ್ ಕೊಟ್ಟಿದ್ದೇವೆ. ಕಾಂಗ್ರೆಸ್ ಪಕ್ಷ 16ರಿಂದ 17 ಕ್ಷೇತ್ರಗಳಲ್ಲಿ ಹಾಗೂ ಜೆಡಿಎಸ್ 4ರಿಂದ 5 ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದರು.

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ಆ ಸಮುದಾಯಕ್ಕೆ ಸಂಬಂಧಿಸಿದ್ದು. ಅದರ ಬಗ್ಗೆ ಕಾಂಗ್ರೆಸ್ ನಿಲುವು ವ್ಯಕ್ತಪಡಿಸುವ ಅಗತ್ಯವಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಹಿಂದೆ ಪ್ರತ್ಯೇಕ ಧರ್ಮಕ್ಕೆ ಆಗ್ರಹಿಸಿ ಕೇಂದ್ರಕ್ಕೆ ಪತ್ರ ಬರೆದಿದ್ದರು. ಆಗ, ಅದು ಬಿಜೆಪಿ ಪ್ರೇರಿತ ಹೋರಾಟವಾಗಲಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News