ಐಪಿಎಲ್‌ನ 200 ಸಿಕ್ಸರ್ ಸರದಾರ ಧೋನಿ

Update: 2019-04-22 12:52 GMT

ಬೆಂಗಳೂರು, ಎ.22: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್. ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ(ಐಪಿಎಲ್) 200 ಸಿಕ್ಸರ್‌ಗಳನ್ನು ಸಿಡಿಸಿದ ಭಾರತದ ಮೊದಲ ದಾಂಡಿಗನೆಂಬ ಕೀರ್ತಿಗೆ ಭಾಜನರಾಗಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರವಿವಾರ ನಡೆದ ಐಪಿಎಲ್ ಪಂದ್ಯದ ವೇಳೆ 84 ರನ್ ಗಳಿಸಿದ ಧೋನಿ ಈ ಸಾಧನೆ ಮಾಡಿದರು. ಗೆಲ್ಲಲು 162 ರನ್ ಬೆನ್ನಟ್ಟಿದ ಚೆನ್ನೈ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿ ಕೇವಲ ಒಂದು ರನ್‌ನಿಂದ ಸೋಲುಂಡಿತು. ಈ ಮೂಲಕ ಈಗ ನಡೆಯುತ್ತಿರುವ ಐಪಿಎಲ್‌ನಲ್ಲಿ ಸತತ ಎರಡನೇ ಸೋಲು ಕಂಡಿತು.

48 ಎಸೆತಗಳಲ್ಲಿ ಔಟಾಗದೆ 84 ರನ್ ಗಳಿಸಿದ ಧೋನಿ ಐದು ಬೌಂಡರಿ ಹಾಗೂ ಏಳು ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಟೂರ್ನಿಯಲ್ಲಿ ತಾನು ಸಿಡಿಸಿದ ಸಿಕ್ಸರ್‌ಗಳ ಸಂಖ್ಯೆಯನ್ನು 203ಕ್ಕೆ ತಲುಪಿಸಿದರು.

12ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಂಚಿ ದಾಂಡಿಗ ಧೋನಿ ಈವರೆಗೆ 17 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

ರೋಹಿತ್ ಶರ್ಮಾ ಹಾಗೂ ಸುರೇಶ್ ರೈನಾ ಐಪಿಎಲ್‌ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನ ಹಂಚಿಕೊಂಡಿದ್ದಾರೆ. ಈ ಇಬ್ಬರು ಆಟಗಾರರು ಐಪಿಎಲ್‌ನಲ್ಲಿ ತಲಾ 190 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಒಟ್ಟು 186 ಸಿಕ್ಸರ್‌ಗಳನ್ನು ಸಿಡಿಸಿ ತಾನೇನು ಕಡಿಮೆ ಇಲ್ಲ ತೋರಿಸಿಕೊಟ್ಟಿದ್ದಾರೆ.

ವೆಸ್ಟ್‌ಇಂಡೀಸ್‌ನ ದೈತ್ಯ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಐಪಿಎಲ್‌ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಹಿರಿಮೆ ತನ್ನದಾಗಿಸಿಕೊಂಡಿದ್ದಾರೆ. ಪ್ರಸಕ್ತ ಐಪಿಎಲ್‌ನಲ್ಲಿ ಪಂಜಾಬ್ ತಂಡವನ್ನು ಪ್ರತಿನಿಧಿಸುತ್ತಿರುವ ಗೇಲ್ ಒಟ್ಟು 323 ಸಿಕ್ಸರ್ ಸಿಡಿಸಿದ್ದಾರೆ. ಎಬಿ ಡಿವಿಲಿಯರ್ಸ್(204) ಎರಡನೇ ಹಾಗೂ ಧೋನಿ ಮೂರನೇ ಸ್ಥಾನದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News