ಧಾರವಾಡದಲ್ಲಿ ಅಚ್ಚುಕಟ್ಟಾಗಿ ನಡೆದ ಮಸ್ಟರಿಂಗ್ ಕಾರ್ಯ; ಮತಗಟ್ಟೆಗಳಿಗೆ ತೆರಳಿದ ಸಿಬ್ಬಂದಿ

Update: 2019-04-22 18:36 GMT

ಧಾರವಾಡ, ಎ.22: ಲೋಕಸಭೆ ಚುನಾವಣೆ ಪ್ರಕ್ರಿಯೆಯಲ್ಲಿ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಧಾರವಾಡದ ಆರ್‌ಎಲ್‌ಎಸ್ ಪದವಿಪೂರ್ವ ಕಾಲೇಜು ಹಾಗೂ ಬಾಸೆಲ್ ಮಿಶನ್ ಆಂಗ್ಲ ಮಾಧ್ಯಮ ಶಾಲೆಗಳ ಆವರಣದಲ್ಲಿ ಸೋಮವಾರದಂದು ಅಚ್ಚುಕಟ್ಟಾಗಿ ನೆರವೇರಿತು.

71 ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 231 ಮತಗಟ್ಟೆಗಳಿವೆ. 74 ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ 266 ಮತಗಟ್ಟೆಗಳಿವೆ. ಪ್ರತಿ ಮತಗಟ್ಟೆಗಳಿಗೆ ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮತದಾನ ಸಹಾಯಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಧಾರವಾಡದ ಆರ್‌ಎಲ್‌ಎಸ್ ಪದವಿ ಪೂರ್ವ ಕಾಲೇಜು ಹಾಗೂ ಬಾಸೆಲ್ ಮಿಷನ್ ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ಹಬ್ಬದ ಸಂಭ್ರಮ ಕಂಡು ಬಂದಿತು.

ಬೆಳಗ್ಗೆ 8 ಗಂಟೆಯ ಹೊತ್ತಿಗೆ ಮತಗಟ್ಟೆಗಳಿಗೆ ನೇಮಕಗೊಂಡಿರುವ ಅಧಿಕಾರಿ, ಸಿಬ್ಬಂದಿಗಳು ಕಾಲೇಜು ಆವರಣದಲ್ಲಿ ಸೇರತೊಡಗಿದರು. ಇದರ ಜೊತೆಗೆ ಚುನಾವಣೆ ಕಾರ್ಯ ಹಾಗೂ ಮತಗಟ್ಟೆಯ ಬಂದೋಬಸ್ತ್‌ಗಾಗಿ ನಿಯೋಜಿತಗೊಂಡಿರುವ ಪೊಲೀಸರು ಕೂಡ ಆಗಮಿಸಿದ್ದರು. ಮತದಾನ ಪ್ರಕ್ರಿಯೆಗೆ ತೆರಳುವ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರನ್ನು ಕರೆದುಕೊಂಡು ಹೋಗಲು ಬಸ್ ಹಾಗೂ ಜೀಪ್‌ಗಳು ಕಾಲೇಜು ಆವರಣದಲ್ಲಿ ಸಾಲಾಗಿ ಜಮಾವಣೆಗೊಂಡಿದ್ದವು. ಧಾರವಾಡ ಜಿಲ್ಲೆಯಾದ್ಯಂತ ಇದಕ್ಕಾಗಿ 363 ಮಾರ್ಗಗಳನ್ನು ಗುರುತಿಸಿ, 180 ಬಸ್‌ಗಳು, 184 ಮ್ಯಾಕ್ಸಿಕ್ಯಾಬ್‌ಗಳು, 167 ಜೀಪ್‌ಗಳನ್ನು ಹಾಗೂ 21 ಇತರ ವಾಹನಗಳು ಸೇರಿ ಒಟ್ಟು 552 ವಾಹನಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಎಲ್ಲಾ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ.

ಕಾಲೇಜು ಆವರಣದಲ್ಲಿ ಅಧಿಕಾರಿ, ಸಿಬ್ಬಂದಿಗಳಿಗೆ ತಾವು ತೆರಳಬೇಕಿರುವ ಮತಗಟ್ಟೆಯ ವಿವರ ಹಾಗೂ ಬಸ್‌ಗಳ ವಿವರವನ್ನು ಧ್ವನಿವರ್ಧಕ ಮೂಲಕ ತಿಳಿಸುವ ವ್ಯವಸ್ಥೆ ಮಾಡಲಾಗಿತ್ತು. ಇನ್ನೊಂದೆಡೆ, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣಾ ಸಾಮಗ್ರಿ, ಇವಿಎಂ ಯಂತ್ರಗಳ ಪೆಟ್ಟಿಗೆ, ಪ್ಯಾಟ್ ಯಂತ್ರದ ಪೆಟ್ಟಿಗೆ ಹಾಗೂ ವಿಶೇಷ ಕಿಟ್‌ಬ್ಯಾಗ್ ಅನ್ನು ವಿತರಿಸಲು ಸೆಕ್ಟರ್‌ವಾರು ಕೊಠಡಿಗಳನ್ನು ಸ್ಥಾಪಿಸಿ, ಆ ಮೂಲಕ ಸಂಬಂಧಪಟ್ಟ ಮತಗಟ್ಟೆಗಳ ಸಿಬ್ಬಂದಿಗೆ ಚುನಾವಣಾ ಸಾಮಗ್ರಿ ತರಿಸುವ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲಾುತು. ಯಾವುದೇ ಅಧಿಕಾರಿ, ಸಿಬ್ಬಂದಿಗಳಿಗೆ ಗೊಂದಲಕ್ಕೆ ಆಸ್ಪದವಿಲ್ಲದಂತೆ, ಮಸ್ಟರಿಂಗ್ ಕಾರ್ಯಕ್ಕೆ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕೈಗೊಳ್ಳಲಾಯಿತು.

ಸ್ಥೈರ್ಯ ತುಂಬಿದ ಡಿಸಿ: ಧಾರವಾಡದಲ್ಲಿ ಮಸ್ಟರಿಂಗ್ ಕಾರ್ಯ ಜರುಗಿದ ಕಾಲೇಜು ಆವರಣಕ್ಕೆ ಬೆಳಗ್ಗೆಯೇ ಆಗಮಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು, ಮಸ್ಟರಿಂಗ್ ಕಾರ್ಯದ ಸಮಗ್ರ ವಿವರವನ್ನು ಪಡೆದುಕೊಂಡರು, ಚುನಾವಣಾ ಸಾಮಗ್ರಿಯನ್ನು ಜೋಡಿಸಿಕೊಳ್ಳಲು ಸಿಬ್ಬಂದಿಗಳಿಗೆ ಕೊಠಡಿಗಳಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಈ ಕೊಠಡಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಮಾತನಾಡಿ, ಯಾವುದೇ ಆತಂಕವಿಲ್ಲದೆ, ಧೈರ್ಯದಿಂದ ಹಾಗೂ ಪ್ರಾಮಾಣಿಕತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸುವಂತೆ ನೈತಿಕ ಸ್ಥೈರ್ಯ ತುಂಬಿದರು.

ಪರಿಸರ ಸ್ನೇಹಿ ಸಾಮಗ್ರಿ ಬಳಕೆ:  ಈ ಬಾರಿಯ ಚುನಾವಣೆಯಲ್ಲಿ ಮತಗಟ್ಟೆಗೆ ಸಾಗಿಸಬೇಕಾದ ಸಾಮಗ್ರಿಗಳನ್ನು ನೀಡಲು ಯಾವುದೇ ಪ್ಲಾಸ್ಟಿಕ್ ಬ್ಯಾಗ್‌ಗಳನ್ನು ಬಳಸದೆ, ಬಟ್ಟೆಯ ಬ್ಯಾಗ್, ಪೇಪರ್ ಕವರ್‌ಗಳನ್ನು ಮಾತ್ರ ಬಳಸುವ ಮೂಲಕ ಮತಗಟ್ಟೆಯನ್ನು ಪರಿಸರ ಸ್ನೇಹಿಯನ್ನಾಗಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ಯಾಟ್ ಯಂತ್ರ ಹಾಗೂ ವಿದ್ಯುನ್ಮಾನ ಮತಯಂತ್ರಗಳಿಗೆ ಅದಷ್ಟು ಬಿಸಿಯ ತಾಪದಿಂದ ರಕ್ಷಿಸುವ ರೀತಿ ಕ್ರಮ ಕೈಗೊಳ್ಳುವಂತೆ ಮತಗಟ್ಟೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಆದರೆ ಮತದಾನ ಗೌಪ್ಯತೆ ಕಾಪಾಡುವ ರೀತಿ ಕಿಟಕಿಗಳ ಮೂಲಕ ಮತದಾನ ಪ್ರಕ್ರಿಯೆ ಕಾಣದಂತೆ ವ್ಯವಸ್ಥೆಗೊಳಿಸಲು ಎಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಪ್ರಥಮ ಚಿಕಿತ್ಸಾ ಕಿಟ್: ಸದ್ಯ ಬಿರು ಬೇಸಿಗೆ ಇರುವುದರಿಂದ, ಮತದಾನ ಕರ್ತವ್ಯಕ್ಕೆ ನಿಯೋಜಿತಗೊಂಡಿರುವ ಸಿಬ್ಬಂದಿಗಳ ಆರೋಗ್ಯ ರಕ್ಷಣೆಯತ್ತಲೂ ಕಾಳಜಿ ವಹಿಸಲಾಗಿದ್ದು, ಈ ಬಾರಿ ಎಲ್ಲ ಮತಗಟ್ಟೆಗಳಿಗೂ ಪ್ರಥಮ ಚಿಕಿತ್ಸಾ ಕಿಟ್, ಕುಡಿಯುವ ನೀರಿನ ವ್ಯವಸ್ಥೆ, ಜೀವ ರಕ್ಷಕ ಔಷಧಿಗಳು ಹಾಗೂ ಓಆರ್‌ಎಸ್ ಪ್ಯಾಕೆಟ್‌ಗಳನ್ನು ಮುಂಜಾಗ್ರತಾ ಕ್ರಮವಾಗಿ ನೀಡಲಾಗಿದೆ. ಅಲ್ಲದೆ ತುರ್ತು ಸಂದರ್ಭದಲ್ಲಿ ವೈದ್ಯರ ಲಭ್ಯತೆ ಇರುವಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ ಹೇಳಿದರು.

ಅಚ್ಚುಕಟ್ಟಾದ ವ್ಯವಸ್ಥೆ: ಧಾರವಾಡದಲ್ಲಿ ಏರ್ಪಡಿಸಲಾದ ಮಸ್ಟರಿಂಗ್ ಕಾರ್ಯ ಯಶಸ್ವಿಯಾಗಿ, ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ನೆರವೇರಿಸಲು ಪೂರ್ವಭಾವಿಯಾಗಿ ಯೋಜನೆ ರೂಪಿಸಿ, ಅದರಂತೆಯೇ ಕಾರ್ಯಗತಗೊಳಿಸಲಾಯಿತು. ಚುನಾವಣಾ ಸಾಮಗ್ರಿ ವಿತರಣೆ, ಮತಯಂತ್ರಗಳ ವಿತರಣೆ, ಚುನಾವಣೆಗೆ ಮತಗಟ್ಟೆಗಳಿಗೆ ನಿಯೋಜನೆ, ಅನಿವಾರ್ಯ ಕಾರಣಗಳಿಗಾಗಿ ಕರ್ತವ್ಯದಲ್ಲಿ ಬದಲಾವಣೆ ಬಯಸಿದವರಿಗೂ, ಇದಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಪರ್ಯಾಯವಾಗಿ ಕಾಯ್ದಿರಿಸಿದ ಸಿಬ್ಬಂದಿಗಳಿಗೆ ಕರ್ತವ್ಯ ನಿಯೋಜಿಸುವ ಕಾರ್ಯವೂ ವ್ಯವಸ್ಥಿತವಾಗಿತ್ತು.

ಚುನಾವಣಾ ಕರ್ತವ್ಯಕ್ಕೆ ತೆರಳಲು ಆಗಮಿಸಿದ್ದ ಅಧಿಕಾರಿ, ಸಿಬ್ಬಂದಿಗಳಿಗೆ ಕಾಲೇಜು ಆವರಣದಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಹಾಗೂ ಉಪಾಹಾರದ ವ್ಯವಸ್ಥೆ ಕೈಗೊಳ್ಳಲಾಯಿತು. ಮತಗಟ್ಟೆಗಳತ್ತ ತೆರಳುವ ಮುನ್ನ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು. ಮತದಾನ ಕಾರ್ಯಕ್ಕೆ ನೇಮಕಗೊಂಡಿರುವ ಹಲವು ಅಧಿಕಾರಿ, ಸಿಬ್ಬಂದಿಗಳೂ ಕೂಡ ಮಸ್ಟರಿಂಗ್ ಕಾರ್ಯಕ್ಕೆ ಕೈಗೊಂಡ ವ್ಯವಸ್ಥೆ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಧಾರವಾಡ ಸಹಾಯಕ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ, ಉಪಭಾಗಾಧಿಕಾರಿ ಮಹ್ಮದ್ ಜುಬೇರ್ ಮಸ್ಟರಿಂಗ್ ಕಾರ್ಯದ ನೇತೃತ್ವವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News