ರಮೇಶ್ ಜಾರಕಿಹೊಳಿಯ ಮನವೊಲಿಕೆ ಅಗತ್ಯ: ಬಸವರಾಜ ಹೊರಟ್ಟಿ

Update: 2019-04-23 15:28 GMT

ಹುಬ್ಬಳ್ಳಿ, ಎ.23: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯ ಮನವೊಲಿಕೆಗೆ ಕಾಂಗ್ರೆಸ್ ನಾಯಕರು ಮುಂದಾಗಬೇಕಾದ ಅಗತ್ಯವಿದೆ ಎಂದು ಹಿರಿಯ ಜೆಡಿಎಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಯ ತೀರ್ಮಾನವನ್ನು ಹಗುರವಾಗಿ ಪರಿಗಣಿಸಬಾರದು. ಅವರ ಜೊತೆಯಲ್ಲಿ ಮತ್ತಷ್ಟು ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿಯಿದೆ ಎಂದರು.

ಅಸಮಾಧಾನಗೊಂಡಿರುವ ರಮೇಶ್ ಜಾರಕಿಹೊಳಿ ಮನವೊಲಿಕೆಗೆ ಕಾಂಗ್ರೆಸ್ ನಾಯಕರು ಪ್ರಯತ್ನ ಮಾಡದಿರುವುದು ಸರಿಯಲ್ಲ. ಮೈತ್ರಿ ಪಕ್ಷದ ನಾಯಕರು ಆರಂಭದಲ್ಲೆ ಅವರ ಜೊತೆ ಮಾತನಾಡಿ, ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಆದರೆ, ಈಗ ಕಾಲ ಮೀರಿ ಹೋಗುತ್ತಿದೆ ಎಂದು ಬಸವರಾಜ ಹೊರಟ್ಟಿ ಹೇಳಿದರು.

ತಮ್ಮನ್ನು ಕಾಂಗ್ರೆಸ್ ಪಕ್ಷದಲ್ಲಿ ನಿರ್ಲಕ್ಷ್ಯ ಮಾಡುತ್ತಿರುವ ಕುರಿತು ರಮೇಶ ಜಾರಕಿಹೊಳಿ, ಹಲವು ಬಾರಿ ನಮ್ಮ ಬಳಿಯೇ ಬೇಸರ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರು ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದರೆ, ಸರಕಾರಕ್ಕೆ ತೊಂದರೆಯಾಗುತ್ತದೆ ಎಂದು ಅವರು ತಿಳಿಸಿದರು.

ಬಿಜೆಪಿ ನಾಯಕರು ಪದೇ ಪದೇ ಮೈತ್ರಿ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುವುದು ಸರಿಯಲ್ಲ. ಸರಕಾರ ಅಸ್ತಿರಗೊಳಿಸಲು ಕನಿಷ್ಠ 14 ಶಾಸಕರು ರಾಜೀನಾಮೆ ನೀಡಬೇಕು. ಮುಂದಿನ ದಿನಗಳಲ್ಲಿ ಬೇರೆ ಸರಕಾರ ಅಧಿಕಾರಕ್ಕೆ ಬಂದರೆ, ಆಗ ಆಪರೇಷನ್ ನಡೆಯುವುದಿಲ್ಲವೇ? ಎಂದು ಬಸವರಾಜ ಹೊರಟ್ಟಿ ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News