ವಿದ್ಯಾರ್ಥಿನಿ ಮಧು ನಿಗೂಢ ಸಾವು ಪ್ರಕರಣ: ಸಿಬಿಐ ತನಿಖೆಗೆ ವಿಶ್ವಕರ್ಮ ಹೋರಾಟ ಸಮಿತಿ ಆಗ್ರಹ

Update: 2019-04-24 12:52 GMT

ಬೆಂಗಳೂರು, ಎ.24: ರಾಯಚೂರಿನ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮಧು ಪತ್ತಾರ ನಿಗೂಢ ಸಾವು ಪ್ರಕರಣವನ್ನು ಈ ಕೂಡಲೇ ರಾಜ್ಯ ಸರಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕರ್ನಾಟಕ ವಿಶ್ವಕರ್ಮ ಹೋರಾಟಗಾರರ ಸಮಿತಿ ಸದಸ್ಯರು ಆಗ್ರಹಿಸಿದ್ದಾರೆ.

ಬುಧವಾರ ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿ ಅಖಿಲ ಕರ್ನಾಟಕ ವಿಶ್ವಕರ್ಮ ಹೋರಾಟಗಾರರ ಸಮಿತಿ ನೇತೃತ್ವದಲ್ಲಿ ಜಮಾಯಿಸಿದ, ಪ್ರತಿಭಟನಾಕಾರರು, ಮಧು ಸಾವಿಗೆ ನ್ಯಾಯ ಒದಗಿಸುವ ಕೆಲಸವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಮಿತಿ ರಾಜ್ಯಾಧ್ಯಕ್ಷೆ ಗಾಯತ್ರಿ ಚಂದ್ರಶೇಖರ್, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು, ಅತ್ಯಾಚಾರಗಳು ಜನಸಾಮಾನ್ಯರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದು, ಸರಕಾರ ಕಠಿಣ ಕ್ರಮ ಕೈಗೊಂಡು ಇವುಗಳನ್ನು ತಡೆಯಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಸಮಿತಿ ವತಿಯಿಂದ ಪ್ರಧಾನ ಮಂತ್ರಿಗಳಿಗೆ, ರಾಜ್ಯಪಾಲರಿಗೆ, ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಪತ್ರ ರವಾನಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದ ಈ ಕೃತ್ಯದಿಂದ ಜನಸಾಮಾನ್ಯರು ಬೆಚ್ಚಿಬೀಳುವಂತಾಗಿದೆ. ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿದಾಗ ಮಾತ್ರ ಇಂತಹ ಪ್ರಕರಣಗಳು ಮರುಕಳಿಸುವುದಿಲ್ಲ. ರಾಜ್ಯ ಸರಕಾರದಿಂದ ಮೃತಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಮಿತಿ ಗೌರವಾಧ್ಯಕ್ಷ ಮೌನೇಶ್ವರ ಆಚಾರ್ಯ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News