ಆನಂದ್‌ ಸಿಂಗ್ ಮೇಲೆ ಹಲ್ಲೆ ಪ್ರಕರಣ: ಶಾಸಕ ಗಣೇಶ್‌ಗೆ ಜಾಮೀನು ಮಂಜೂರು

Update: 2019-04-24 16:57 GMT

ಬೆಂಗಳೂರು, ಎ.24: ವಿಜಯನಗರ ಶಾಸಕ ಆನಂದ್‌ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಜೆ.ಎನ್.ಗಣೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರಿದ್ದ ನ್ಯಾಯಪೀಠವು ವಕೀಲರ ವಾದ ಆಲಿಸಿ ಆದೇಶವನ್ನು ಕಾಯ್ದಿರಿಸಿತ್ತು. ಬುಧವಾರ ಗಣೇಶ್‌ಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. 

ಬೆಂಗಳೂರು ಹೊರವಲಯದ ಈಗಲ್ಟನ್ ರೆಸಾರ್ಟ್‌ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿರುವ ಆರೋಪ ಗಣೇಶ್ ಮೇಲಿದೆ. ಪ್ರಕರಣ ಬಯಲಿಗೆ ಬರುತ್ತಿದ್ದಂತೆ ನಾಪತ್ತೆಯಾಗಿದ್ದ ಗಣೇಶ್ ಅವರನ್ನು ಫೆ.20 ರಂದು ಅಹಮದಾಬಾದ್‌ನಲ್ಲಿ ಕರ್ನಾಟಕ ಪೊಲೀಸರು ಬಂಧಿಸಿದ್ದರು. ಈ ಮಧ್ಯೆ, ಶಾಸಕ ಜೆ.ಎನ್.ಗಣೇಶ್ ಗಣೇಶ್ ತಮ್ಮ ಬಿಡುಗಡೆಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗಣೇಶ್ ಪರ ವಕೀಲರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿತ್ತು. ನಂತರ ಗಣೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗಣೇಶ್‌ಗೆ ಚಿಕಿತ್ಸೆ: ಮತ್ತೊಂದೆಡೆ ಕಂಪ್ಲಿ ಶಾಸಕ ಗಣೇಶ್ ಅನಾರೋಗ್ಯದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂತ್ರಕೋಶ - ಬೆನ್ನು ಹಾಗೂ ಹರ್ನಿಯಾ ಸಮಸ್ಯೆ ಇರುವ ಹಿನ್ನೆಲೆಯಲ್ಲಿ ಕಂಪ್ಲಿ ಗಣೇಶ್ ಅವರನ್ನ ಜೈಲಾಧಿಕಾರಿಗಳ ಅನುಮತಿ ಮೇರೆಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮಧ್ಯೆ ಹೈಕೋರ್ಟ್ ಕಂಪ್ಲಿ ಶಾಸಕರಿಗೆ ಜಾಮೀನು ಮಂಜೂರು ಮಾಡಿದ್ದು, ಕೋರ್ಟ್ ಪ್ರತಿ ಸಿಕ್ಕ ತಕ್ಷಣ ಅವರನ್ನ ಬಿಡುಗಡೆ ಮಾಡಲಾಗುವುದು ಎಂದು ಜೈಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News