ಐಟಿ ಕಚೇರಿ ಎದುರು ಪ್ರತಿಭಟನೆ: ಪಿಐಎಲ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2019-04-24 18:30 GMT

ಬೆಂಗಳೂರು, ಎ.24: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿ ಇನ್ನಿತರ ರಾಜಕೀಯ ಮುಖಂಡರುಗಳು ಕಾನೂನನ್ನು ಉಲ್ಲಂಘಿಸಿ ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನ್ನು ಪಿಐಎಲ್ ಆಗಿ ಪರಿಗಣಿಸಲು ಬರುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಕುರಿತು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಎ.ಮಲ್ಲಿಕಾರ್ಜುನ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಪಾರ್ಟಿ ಇನ್ ಪರ್ಸನ್ ಆಗಿ ವಾದ ಮಂಡಿಸಿದ ಅರ್ಜಿದಾರ ಎ.ಮಲ್ಲಿಕಾರ್ಜುನ್ ಅವರು, ಸಿಎಂ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೇರಿ ಇನ್ನಿತರ ರಾಜಕೀಯ ಮುಖಂಡರುಗಳು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾನೂನನ್ನು ಉಲ್ಲಂಘಿಸಿ ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಅಲ್ಲದೆ, ಈ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲು ಹೋದರೂ ಕಮರ್ಷಿಯಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿಲ್ಲ. ಡಿಜಿ ಮತ್ತು ಐಜಿ ಅವರೂ ಈಗಾಗಲೇ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳುತ್ತಾರೆ. ಆದರೆ, ಪ್ರಕರಣದಿಂದ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೇರಿ ಇನ್ನಿತರ ಮುಖಂಡರನ್ನು ಎಫ್‌ಐಆರ್‌ನಿಂದ ಕೈಬಿಟ್ಟು ಮುಖಂಡರಲ್ಲದವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ಕಾನೂನು ಬಾಹಿರವಾಗಿ ಐಟಿ ಕಚೇರಿ ಎದುರು ಪ್ರತಿಭಟನೆ ನಡೆಸಿದವರ ವಿರುದ್ಧ ಹಾಗೂ ಪ್ರಕರಣ ದಾಖಲಿಸಲು ಹೋದರೂ ಯಾವುದೆ ಸೂಕ್ತ ನಿರ್ಧಾರ ಕೈಗೊಳ್ಳದರ ವಿರುದ್ದ ಕ್ರಮಕ್ಕೆ ನಿರ್ದೇಶಿಸಲು ಈ ಅರ್ಜಿಯನ್ನು ಪಿಐಎಲ್ ಆಗಿ ಪರಿಗಣಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ಆದರೆ, ನ್ಯಾಯಪೀಠವು ಅರ್ಜಿದಾರರ ವಾದವನ್ನು ಆಲಿಸಿ ಈ ಅರ್ಜಿಯನ್ನು ಪಿಐಎಲ್ ಆಗಿ ಪರಿಗಣಿಸಲು ಬರುವುದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News