ರಾಜ್ಯದಲ್ಲಿ ಬಿಜೆಪಿ 22 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ: ಅರವಿಂದ ಲಿಂಬಾವಳಿ

Update: 2019-04-25 15:26 GMT

ಬೆಂಗಳೂರು, ಎ.25: ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಶೇಕಡವಾರು ಮತದಾನದ ಬಗ್ಗೆ ಚರ್ಚೆ ನಡೆಸಲಾಗಿದ್ದು, ಬಿಜೆಪಿ ಕನಿಷ್ಠ 22 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ತಿಳಿಸಿದರು.

ಗುರುವಾರ ನಗರದ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮೇ ಮೊದಲ ವಾರದಲ್ಲಿ ರಾಜ್ಯದ ಮುಖಂಡರು ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಪರಿಶೀಲನಾ ಸಭೆಗಳನ್ನು ನಡೆಸಲು ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಕುಂದಗೋಳ ಹಾಗೂ ಚಿಂಚೋಳಿ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಉಭಯ ಕ್ಷೇತ್ರಗಳ ಮುಖಂಡರ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದರು.

ಕುಂದಗೋಳ ಕ್ಷೇತ್ರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಸಂಸದ ಪ್ರಹ್ಲಾದ್ ಜೋಶಿ, ಶಾಸಕ ಗೋವಿಂದ ಕಾರಜೋಳರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಅದೇ ರೀತಿ, ಚಿಂಚೋಳಿ ಕ್ಷೇತ್ರಕ್ಕೆ ಮಾಜಿ ಸಚಿವರಾದ ವಿ.ಸೋಮಣ್ಣ, ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರ್ ಹಾಗೂ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್‌ರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಅರವಿಂದ ಲಿಂಬಾವಳಿ ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ತೆಗೆದು ಹಾಕಲಾಗಿರುವ ಕುರಿತು ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ, ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸಲು ಚರ್ಚಿಸಲಾಗಿದೆ. ಅಲ್ಲದೇ, ಹಾಸನದಲ್ಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪೊಲೀಸರ ಜೀಪ್‌ನಲ್ಲಿ ಹಣ ಸಾಗಿಸಿರುವುದು ಸೇರಿದಂತೆ ಇನ್ನಿತರ ಚುನಾವಣಾ ಅಕ್ರಮಗಳ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News