ಪ್ರಧಾನಿ ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಜಿಗ್ನೇಶ್ ಮೇವಾನಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2019-04-26 16:09 GMT

ಬೆಂಗಳೂರು, ಮೇ.26: 2018ರ ಸಾಲಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ರದ್ದುಕೋರಿ ಗುಜರಾತನ್‌ನ ವಡಗಾಂವ್ ಶಾಸಕ ಜಿಗ್ನೇಶ್ ಮೇವಾನಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ಜಿಗ್ನೇಶ್ ಮೇವಾನಿ ಹಾಗೂ ಟಿ. ಶಫಿಯುಲ್ಲಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು. ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿತು. ಸರಕಾರದ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರ ವಿರುದ್ಧ ದಾಖಲಾಗಿರುವ ಪ್ರಕರಣ ವಿಚಾರಣೆಗೆ ಅರ್ಹವಾಗಿದ್ದು, ದೂರಿಗೆ ಸಂಬಂಧಿಸಿದಂತೆ ಈಗಾಗಲೇ ಜಾರ್ಜ್‌ಶೀಟ್ ಸಲ್ಲಿಸಲಾಗಿದೆ. ಅಲ್ಲದೇ ಅರ್ಜಿದಾರರ ಪ್ರಚೋದನಕಾರಿ ಹೇಳಿಕೆಗೆ ಸಾಕ್ಷಗಳು ಲಭ್ಯವಾಗಿವೆ. ಹೀಗಾಗಿ, ಈ ಹಂತದಲ್ಲಿ ಪ್ರಕರಣ ರದ್ದುಗೊಳಿಸಬಾರದು ಎಂದು ನ್ಯಾಯಪೀಠವನ್ನು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಜಿಗ್ನೇಶ್ ಮೇವಾನಿ ಹಾಗೂ ಟಿ. ಶಫಿಯುಲ್ಲಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ವಿಚಾರಣೆ ಮುಂದೂಡಿತು.

ಪ್ರಕರಣವೇನು: 2018ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಮು ಸೌಹಾರ್ದ ವೇದಿಕೆ 2018ರ ಎ.6ರಂದು ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ‘ಸಂವಿಧಾನ ಉಳಿವಿಗಾಗಿ ಕರ್ನಾಟ’ ಸಂವಾದ ಕಾರ್ಯಕ್ರಮದಲ್ಲಿ ಜಗ್ನೇಶ್ ಮೇವಾನಿ ಮಾತನಾಡುತ್ತ, ‘ಎ.15ರಂದು ಪ್ರಧಾನಿ ಮೋದಿ ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕದ ಯುವ ಜನತೆಯ ಪಾತ್ರ ಬಹಳ ಮುಖ್ಯವಾಗಿದೆ. ಪ್ರಧಾನಿಯವರ ಪ್ರಚಾರ ಸಭೆಗೆ ನುಗ್ಗಿ ಕುರ್ಚಿಗಳು ಎಸೆದಾಡಿ ಗಲಾಟೆ ಮಾಡಿ ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುವ ಭರವಸೆ ಏನಾಯಿತು ಎಂದು ಮೋದಿಯವರನ್ನು ಪ್ರಶ್ನಿಸಿ, ಉತ್ತರ ಕೊಡದಿದ್ದರೆ ಹಿಮಾಲಯಕ್ಕೆ ಹೋಗಿ ರಾಮ ಮಂದಿರ ಹಿಡಿದು ಗಂಟೆ ಬಾರಿಸುತ್ತ ಕುಳಿತುಕೊಳ್ಳುವಂತೆ ಅವರಿಗೆ ಹೇಳಿ ಎಂದು ಭಾಷಣ ಮಾಡಿದ್ದರು.

ಈ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿ ತಂಡದ ಅಧಿಕಾರಿ ಟಿ. ಜಯಂತ್ ಚಿತ್ರದುರ್ಗ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ, ಜನರಲ್ಲಿ ದ್ವೇಷ ಭಾವನೆ ಮೂಡುವಂತೆ ಮಾಡುವ ಮೂಲಕ ಪ್ರಧಾನಿ ಕಾರ್ಯಕ್ರಮದಲ್ಲಿ ಗುಂಪು ಕಟ್ಟಿಕೊಂಡು ಗಲಾಟೆ ಎಬ್ಬಿಸುವಂತೆ ಪ್ರಚೋದನೆ ನೀಡಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಲ್ಲದೇ ಸಂವಾದ ಕಾರ್ಯಕ್ರಮಕ್ಕೆ ಅನುಮತಿ ನೀಡುವಾಗ ವಿಧಿಸಲಾಗಿದ್ದ ನಿರ್ಬಂಧಗಳನ್ನೂ ಸಹ ಅವರು ಉಲ್ಲಂಘಿಸಿದ್ದಾರೆಂದು ಜಿಗ್ನೇಶ್ ಮೇವಾನಿ ಹಾಗೂ ಶಫಿಯುಲ್ಲಾ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಚಿತ್ರದುರ್ಗದ ಜೆಎಂಎಫ್‌ಸಿ ನ್ಯಾಯಾಲಯ ವಿಚಾರಣೆಗೆ ಅನುಮತಿ ನೀಡಿ ಸಮನ್ಸ್ ಜಾರಿಗೊಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News