ಅಂಬೇಡ್ಕರ್ ಎಲ್ಲ ವರ್ಗಗಳ ಜನನಾಯಕ: ನ್ಯಾ.ನಾಗಮೋಹನ್‌ದಾಸ್

Update: 2019-04-27 13:21 GMT

ಬೆಂಗಳೂರು, ಎ. 27: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸುವುದು ಸರಿಯಲ್ಲ. ಅವರು ಎಲ್ಲ ವರ್ಗದ ಜನರ ನಾಯಕ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್. ಎನ್.ನಾಗಮೋಹನ್‌ದಾಸ್ ಪ್ರತಿಪಾದಿಸಿದ್ದಾರೆ.

ಶನಿವಾರ ಕೃಷಿ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರು ಮತ್ತು ಕಾರ್ಮಿಕರಿಗೆ ನ್ಯಾಯಬದ್ಧ ಹಕ್ಕುಗಳನ್ನು ಕೊಡಿಸಿದ್ದೇ ಅಂಬೇಡ್ಕರ್ ಅವರು ಎಂದು ತಿಳಿಸಿದರು.

ಮಹಿಳೆಯರಿಗೆ ಆಸ್ತಿ ಹಕ್ಕು ಕಲ್ಪಿಸಿದ್ದು, ದುಡಿಯುವ ವರ್ಗದ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಿಕೊಟ್ಟವರು ಅಂಬೇಡ್ಕರ್ ಎಂದ ಅವರು, ಶೋಷಿತ ಸಮುದಾಯಗಳಿಗೆ ಮೀಸಲಾತಿ ಸೌಲಭ್ಯ ಕೊಡಿಸುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತಂದಿದ್ದಾರೆ ಎಂದು ನಾಗಮೋಹನ್‌ದಾಸ್ ತಿಳಿಸಿದರು.

ಸಂವಿಧಾನ ಉಳಿಸಿ: ಇತ್ತೀಚಿನ ದಿನಗಳಲ್ಲಿ ಸಂವಿಧಾನವನ್ನು ಸುಡಲು ಕೆಲವರು ಯತ್ನಿಸುತ್ತಿರುವುದು ಆತಂಕದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ ನಾಗಮೋಹನ್ ದಾಸ್, ಸಂವಿಧಾನ ಇರುವುದರಿಂದಲೇ ದೇಶ ಉಳಿದಿದೆ. ಹೀಗಾಗಿ ಎಲ್ಲರೂ ನಮ್ಮ ಸಂವಿಧಾನ ರಕ್ಷಣೆಗೆ ಮುಂದಾಗಬೇಕು ಎಂದು ಇದೇ ವೇಳೆ ಕರೆ ನೀಡಿದರು.

ಕೃಷಿ ಇಲಾಖೆ ನಿರ್ದೇಶಕ ಬಿ.ವೈ.ಶ್ರೀನಿವಾಸ್ ಮಾತನಾಡಿ, ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಆ ಮೂಲಕ ಶೋಷಿತ ಸಮುದಾಯಗಳಿಗೆ ಸರಕಾರದ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೌಲಭ್ಯಗಳನ್ನು ಇತರೆ ವರ್ಗದವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕಲ್ಪಿಸಬಾರದು. ಸರಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕೆಂದು ಅವರು ಸೂಚಿಸಿದರು.

ಇದೇ ಸಂದರ್ಭದಲ್ಲಿ ಅನಾಥ ಶವಗಳ ಸಂಸ್ಕಾರ, ಭಿಕ್ಷುಕರು, ಅಶಕ್ತರು, ನಿರ್ಗತಿಕರ ಸೇವೆಯಲ್ಲಿ ತೊಡಗಿರುವ ಆಟೋ ರಾಜಣ್ಣ ಅವರನ್ನು ಸಂಘದಿಂದ 5 ಸಾವಿರ ರೂ.ಚೆಕ್ ನೀಡಿ ಸನ್ಮಾನಿಸಲಾಯಿತು. ಇದೇ ವೇಳೆ ನಿರ್ದೇಶಕ ಬಿ.ವೈ.ಶ್ರೀನಿವಾಸ್ ಆಟೋ ರಾಜಣ್ಣ ಅವರಿಗೆ 10 ಸಾವಿರ ರೂ.ನೆರವು ನೀಡಿದರು.

ಕೃಷಿ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಸಂಘದ ಅಧ್ಯಕ್ಷ ಶಿವರಾಜ್, ಪದ್ದಯ್ಯ ನಾಯ್ಕ, ವ್ಯವಸ್ಥಾಪಕಿ ನಿರ್ದೇಶಕಿ ನಂದಿನಿ ಕುಮಾರಿ, ರಾಜ್ಯ ಸರಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಶಿವಶಂಕರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News