ಇನ್ನು ಮುಂದೆ ಪ್ರಧಾನಿ ಮೋದಿ ನಾಟಕ ನಡೆಯುವುದಿಲ್ಲ: ಕೆ.ಸಿ.ವೇಣುಗೋಪಾಲ್

Update: 2019-04-27 16:15 GMT

ಬೆಂಗಳೂರು, ಎ.27: ದೇಶದಲ್ಲಿ ಇನ್ನು ಮುಂದೆ ಪ್ರಧಾನಿ ನರೇಂದ್ರ ಮೋದಿಯ ನಾಟಕ ನಡೆಯುವುದಿಲ್ಲ. ಜನರು ಬದಲಾವಣೆ ಬಯಸಿದ್ದಾರೆ. ಕರ್ನಾಟಕದಲ್ಲಿ ನಾವು 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶನಿವಾರ ನಗರದ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ನಡೆದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ದೇಶದಲ್ಲಿ ನಿರುದ್ಯೋಗ, ರೈತರು, ಬಡವರ ಸಮಸ್ಯೆ, ಮಹಿಳೆಯರ ರಕ್ಷಣೆ ಸೇರಿದಂತೆ ಹಲವಾರು ಜ್ವಲಂತ ಸಮಸ್ಯೆಗಳು ತಾಂಡವವಾಡುತ್ತಿವೆ. ಇದ್ಯಾವುದರ ಬಗ್ಗೆಯೂ ಮೋದಿ ಮಾತನಾಡುವುದಿಲ್ಲ. ಇವೆಲ್ಲ ಜನರಿಗೆ ಅರ್ಥವಾಗಿದೆ. ನಾವು ಜನರಲ್ಲಿ ಉತ್ಸಾಹವನ್ನು ಕಾಣುತ್ತಿದ್ದು, ಕೇಂದ್ರದಲ್ಲಿ ಮುಂದಿನ ಸರಕಾರ ನಮ್ಮದೇ ಆಗಿರುತ್ತದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಮೈತ್ರಿ ಸರಕಾರ ರಚನೆಯಾದಾಗಿನಿಂದಲೂ ಬಿಜೆಪಿಯವರು ಇಲ್ಲಿ ಮತ್ತೆ ಸರಕಾರ ರಚನೆ ಮಾಡುವ ಕನಸು ಕಾಣುತ್ತಿದ್ದಾರೆ. ಅವರಿಗೆ ಜನರ ಮೇಲೆ ವಿಶ್ವಾಸವಿಲ್ಲ. ಆದುದರಿಂದ, ಕುದುರೆ ವ್ಯಾಪಾರದ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ ಎಂದು ವೇಣುಗೋಪಾಲ್ ಟೀಕಿಸಿದರು.

ಕಾಂಗ್ರೆಸ್ ಪಕ್ಷದಿಂದ 20 ಶಾಸಕರು ಬಿಜೆಪಿಗೆ ಬರುತ್ತಾರೆ ಎಂದು ಕನಸು ಕಾಣುತ್ತಿದ್ದಾರೆ. ಮೇ 23ರಂದು ಪ್ರಕಟವಾಗುವ ಲೋಕಸಭಾ ಚುನಾವಣೆಯ ಫಲಿತಾಂಶವೇ, ಬಿಜೆಪಿಯವರಿಗೆ ತಕ್ಕ ಉತ್ತರ ನೀಡಲಿದೆ. ರಮೇಶ್ ಜಾರಕಿಹೊಳಿಗಿಂತ ಹೆಚ್ಚಿನ ಮಹತ್ವದ ವಿಷಯಗಳು ನಮ್ಮ ಮುಂದಿವೆ. ಆದುದರಿಂದ, ಆ ಬಗ್ಗೆ ಏನು ಪ್ರತಿಕ್ರಿಯಿಸುವುದಿಲ್ಲ ಎಂದು ಅವರು ಹೇಳಿದರು.

ಲೋಕಸಭಾ ಚುನಾವಣೆ ಬಗ್ಗೆ ಸಚಿವರ ಬಳಿ ವರದಿಯನ್ನು ಪಡೆದಿದ್ದು, ಒಳ್ಳೆಯ ಪ್ರತಿಕ್ರಿಯೆ ಬಂದಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಮೋದಿಯವರ ಆರ್ಭಟ ಹಾಗೂ ಸುಳ್ಳಿನ ಪ್ರಚಾರಕ್ಕೆ ಈ ಚುನಾವಣೆ ಇತಿಶ್ರೀ ಹಾಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಎರಡು ಕ್ಷೇತ್ರಗಳಲ್ಲಿ ನಾವು ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗೂ ಸಚಿವರು ಕ್ಷೇತ್ರಗಳನ್ನು ಹಂಚಿಕೊಂಡು ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದು ದಿನೇಶ್‌ಗುಂಡೂರಾವ್ ತಿಳಿಸಿದರು.

ಕುಂದಗೋಳ ಕ್ಷೇತ್ರಕ್ಕೆ ಆಕಸ್ಮಿಕವಾಗಿ ಚುನಾವಣೆ ಎದುರಾಗಿದೆ. ಆದರೆ, ಚಿಂಚೋಳಿಯಲ್ಲಿ ಕುದುರೆ ವ್ಯಾಪಾರಕ್ಕೆ ಬಲಿಯಾಗಿ, ಅನೈತಿಕ ರಾಜಕಾರಣ ಮಾಡಿರುವ ಉಮೇಶ್ ಜಾಧವ್‌ಗೆ ಲೋಕಸಭಾ ಚುನಾವಣೆಯಲ್ಲೂ ಕಲಬುರಗಿ ಕ್ಷೇತ್ರದ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಅವರು ಹೇಳಿದರು.

ಕುಟುಂಬ ರಾಜಕಾರಣದ ಬಗ್ಗೆ ಟೀಕಿಸುವ ಬಿಜೆಪಿಯವರು ಚಿಂಚೋಳಿಯಲ್ಲಿ ಉಮೇಶ್ ಜಾಧವ್, ಮಗನಿಗೆ ಟಿಕೆಟ್ ನೀಡಿದ್ದಾರೆ. ಎಲ್ಲಿ ಹೋಯಿತು ಇವರ ನೈತಿಕತೆ. ಉಮೇಶ್ ಜಾಧವ್ ಮೋಸದ ರಾಜಕಾರಣ, ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ. ಈ ಉಪ ಚುನಾವಣೆಯಲ್ಲಿ ಅವರನ್ನು ಜನತೆ ಧೂಳೀಪಟ ಮಾಡುತ್ತಾರೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News